ಸೋಮವಾರ, ಸೆಪ್ಟೆಂಬರ್ 27, 2021
24 °C
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಕಳವಳ

ದೇಶದಲ್ಲಿ ಪ್ರತಿ ನಾಲ್ಕು ನಿಮಿಷಕ್ಕೆ ಒಂದು ಆತ್ಮಹತ್ಯೆ: ನಿಮ್ಹಾನ್ಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದೇಶದಲ್ಲಿ ಪ್ರತಿ ನಾಲ್ಕು ನಿಮಿಷಗಳಿಗೆ ಕನಿಷ್ಠ ಒಂದು ಆತ್ಮಹತ್ಯೆ ಪ್ರಕರಣ ವರದಿಯಾಗುತ್ತಿದೆ. ಕೋವಿಡ್ ಕಾಣಿಸಿಕೊಂಡ ಬಳಿಕ ಯುವಜನತೆ ಹೆಚ್ಚಾಗಿ ಮಾನಸಿಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ’ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌) ತಿಳಿಸಿದೆ. 

ವಿಶ್ವ ಆತ್ಮಹತ್ಯೆ ತಡೆದಿನದ ಪ್ರಯುಕ್ತ ಸಂಸ್ಥೆಯು ಸೆಪ್ಟೆಂಬರ್ ತಿಂಗಳು ಪೂರ್ತಿ ಮಾನಸಿಕ ಆರೋಗ್ಯ ಮತ್ತು ಶಿಕ್ಷಣದ ಕುರಿತು ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದೆ. 

‘ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಮೂರನೇ ಒಂದರಷ್ಟು ಮಂದಿ ಮಾತ್ರ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿರುತ್ತಾರೆ. ಉಳಿದ ಎರಡು ಭಾಗದಷ್ಟು ಮಂದಿ ಆರ್ಥಿಕ ಸಮಸ್ಯೆ ಹಾಗೂ ಕುಟುಂಬದ ಬಾಂಧವ್ಯ ಕಡಿದುಕೊಳ್ಳುವಿಕೆಯಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಪರಿಸರ ಮಾಲಿನ್ಯ, ಶಬ್ದ ಮಾಲಿನ್ಯ ಕೂಡಾ ಮಾನಸಿಕ ಸಮಸ್ಯೆಗೆ ಕಾರಣವಾಗುತ್ತಿದೆ. ಬಹುತೇಕ ಎಲ್ಲ ಮಾನಸಿಕ ಕಾಯಿಲೆಗಳನ್ನು ಗುಣಪಡಿಸಬಹುದಾಗಿದೆ. ಮನಸ್ಸಿನ ನಿಗ್ರಹವಿಟ್ಟುಕೊಂಡಲ್ಲಿ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಂದ ಅಂತರ ಕಾಯ್ದುಕೊಳ್ಳಬಹುದು’ ಎಂದು ನಿಮ್ಹಾನ್ಸ್ ವೈದ್ಯರು ತಿಳಿಸಿದ್ದಾರೆ. 

‘ಆತ್ಮಹತ್ಯೆಯ ಆಲೋಚನೆಯನ್ನು ಹೊಂದಿರುವವರಿಗೆ ಹೊಸ ಭರವಸೆ ಮೂಡಿಸಬೇಕು. ಕೋವಿಡ್ ಕಾಣಿಸಿಕೊಂಡ ಬಳಿಕ ಹಲವಾರು ಮಂದಿ ಉದ್ಯೋಗ ಕಳೆದುಕೊಂಡು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಕೂಡ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಿದೆ. ಅದೇ ರೀತಿ, ಕೌಟುಂಬಿಕ ಸಮಸ್ಯೆ, ವೃತ್ತಿ ಸ್ಥಳದಲ್ಲಿ ಮಾನಸಿಕ ಒತ್ತಡ ಸೇರಿದಂತೆ ವಿವಿಧ ಸಮಸ್ಯೆಗಳಿಂದಲೂ ಕೆಲವರು ಆತ್ಮಹತ್ಯೆಯ ಹಾದಿ ಹಿಡಿಯುವ ಸಾಧ್ಯತೆ ಇರುತ್ತದೆ’ ಎಂದು ಸಂಸ್ಥೆಯ ಮಾನಸಿಕ ಆರೋಗ್ಯ ಶಿಕ್ಷಣ ವಿಭಾಗದ ಮುಖ್ಯಸ್ಥೆ ಡಾ. ಮೀನಾ ಕೆ.ಎಸ್. ತಿಳಿಸಿದ್ದಾರೆ. 

‘ಮಾನಸಿಕ ಅನಾರೋಗ್ಯವು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಳ್ಳುವುದೇ ಪರಿಹಾರ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು