ಗುರುವಾರ , ನವೆಂಬರ್ 26, 2020
20 °C

‘ವಾಣಿಜ್ಯ ಸಂಸ್ಥೆಗಳ ನಾಮಫಲಕದಲ್ಲಿ ಕನ್ನಡ ಕಣ್ಮರೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಕಣ್ಮರೆಯಾಗುತ್ತಿದೆ. ಇದರಿಂದಾಗಿ ಆಂಗ್ಲ ಭಾಷೆಯ ನಾಮಫಲಕಗಳಿಗೆ ಕನ್ನಡಪರ ಹೋರಾಟಗಾರರು ಮಸಿ ಬಳಿಯಬೇಕಾಗದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಭಾನುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು ಶತಮಾನೋತ್ಸವ ದತ್ತಿ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.

‘ಸರ್ಕಾರವು ವಾಣಿಜ್ಯ ಸಂಸ್ಥೆಗಳ ನಾಮಫಲಕಗಳು ಕನ್ನಡದಲ್ಲಿ ಇರಬೇಕೆಂದು ಈ ಹಿಂದೆ ಸೂಚಿಸಿದೆ. ಆದರೆ, ಬಹುತೇಕರು ಕನ್ನಡದ ನಾಮಫಲಕವನ್ನು ಈವರೆಗೂ ಅಳವಡಿಸಿಕೊಂಡಿಲ್ಲ. ಸರ್ಕಾರವು ಕನ್ನಡವನ್ನು ಕಡೆಗಣಿಸಿದ ಸಂಸ್ಥೆಗಳ ಮೇಲೆ ಕಠಿಣ ಕ್ರಮ ಜಾರಿಮಾಡಬೇಕು. ಕನ್ನಡ ಭಾಷೆ ಸಂಕಷ್ಟಕ್ಕೆ ಸಿಲುಕಿದಾಗ ಸರ್ಕಾರವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದೆ ಕನ್ನಡ ಭಾಷೆಯನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಲಿದೆ’ ಎಂದು ಬೇಸರ ವ್ಯಕ್ತಪಡಿಸಿದರು. ‘ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದೆ. ಒಂದನೇ ತರಗತಿಯಿಂದ 7ನೇ ತರಗತಿಯವರೆಗೂ ಒಬ್ಬ ಶಿಕ್ಷಕರೆ ಪಾಠ ಮಾಡಬೇಕಾದ ಪರಿಸ್ಥಿತಿ ಈಗಲೂ ಇದೆ. ಹೀಗಾದರೆ ಕನ್ನಡ ಶಾಲೆಗಳ ಬೆಳವಣಿಗೆ ಅಸಾಧ್ಯ. ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು’ ಎಂದರು. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್, ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು