ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಹತ್ಯೆ ನಿಷೇಧ ಕಾಯ್ದೆ ರದ್ದು ಇಲ್ಲ: ಸಚಿವ ವೆಂಕಟೇಶ್‌

ಸಚಿವರ ದ್ವಂದ್ವ ಹೇಳಿಕೆ ಆರೋಪ; ಸ್ಪಷ್ಟ ನಿಲುವಿಗೆ ಒತ್ತಾಯಿಸಿ ಬಿಜೆಪಿ ಸದಸ್ಯರ ಧರಣಿ
Published 5 ಜುಲೈ 2023, 23:32 IST
Last Updated 5 ಜುಲೈ 2023, 23:32 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಮತ್ತು ಸಂರಕ್ಷಣಾ ಅಧಿನಿಯಮ–2020 (ಗೋಹತ್ಯೆ ನಿಷೇಧ) ರದ್ದುಪಡಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್‌ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಎನ್‌. ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಗೋಹತ್ಯೆ ನಿಷೇಧ ಕಾಯ್ದೆಯ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಸಚಿವರ ಉತ್ತರದಿಂದ ತೃಪ್ತರಾಗದ ರವಿಕುಮಾರ್‌, ‘ಮೈಸೂರಿನಲ್ಲಿ ಪಶುಸಂಗೋಪನಾ ಸಚಿವರೇ ಎಮ್ಮೆ, ಕೋಣಗಳನ್ನು ಕಡಿಯುವುದಾದರೆ ಗೋವುಗಳನ್ನು ಯಾಕೆ ಕಡಿಯಬಾರದು ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಈಗ ಸದನದಲ್ಲಿ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ’ ಎಂದರು.

‘ರಾಜ್ಯದಲ್ಲಿ ಸಾವಿರಾರು ಗೋವುಗಳ ಹತ್ಯೆ ನಡೆಯುತ್ತಿದೆ ಮತ್ತು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಆದರೂ, ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ರೂಪಿಸಿದ್ದ ಕಾಯ್ದೆ‌ ಕುರಿತು ದ್ವಂದ್ವ ಹೇಳಿಕೆಗಳನ್ನು ನೀಡುತ್ತಿರುವ ಸರ್ಕಾರ ತಕ್ಷಣವೇ ತನ್ನ ನಿಲುವು ಸ್ಪಷ್ಟಪಡಿಸಲೇಬೇಕು’ ಎಂದು ಒತ್ತಾಯಿಸಿ ಸಭಾಪತಿ ಪೀಠದ ಮುಂದೆ ಧರಣಿ ನಡೆಸಿದರು. ರವಿಕುಮಾರ್‌ ಅವರಿಗೆ ಬಿಜೆಪಿಯ ಇತರ ಸದಸ್ಯರು ಜತೆಗೂಡಿದರು.

ಸಚಿವ ರಾಮಲಿಂಗಾರೆಡ್ಡಿ, ‘ಅತಿ ಹೆಚ್ಚು ಗೋಮಾಂಸ ರಫ್ತು ಮಾಡುತ್ತಿರುವ ಭಾರತ ಈಗ ಎರಡನೇ ಸ್ಥಾನದಲ್ಲಿದೆ. ಪ್ರತಿ ವರ್ಷ 26 ಸಾವಿರ ಟನ್‌ಗೂ ಹೆಚ್ಚು ಗೋಮಾಂಸ ರಫ್ತು ಮಾಡಲಾಗುತ್ತಿದೆ. ಇದನ್ನು ಸ್ಥಗಿತಗೊಳಿಸಲು ನಿಮ್ಮಿಂದ ಸಾಧ್ಯವೇ? ರಾಜಕೀಯ ಕಾರಣಕ್ಕೆ ಧರಣಿ ನಡೆಸಬೇಡಿ’ ಎಂದು ಕಿಡಿಕಾರಿದರು.

ಇದಕ್ಕೆ ದನಿಗೂಡಿಸಿದ ಸಚಿವ ಕೃಷ್ಣ ಬೈರೇಗೌಡ, ‘ಸರ್ಕಾರ ಸ್ಪಷ್ಟ ಉತ್ತರ ಕೊಟ್ಟಿದ್ದರೂ ಬಿಜೆಪಿ ಸದಸ್ಯರು ಸದನದ ಸಮಯ ವ್ಯರ್ಥ ಮಾಡುತ್ತಿದ್ದಾರೆ’ ಎಂದರು.

‘ಬಿಜೆಪಿ ಸದಸ್ಯರು ಮೊಂಡುತನ ಮಾಡುತ್ತಿದ್ದಾರೆ. ಸಚಿವರು ಸಮರ್ಪಕ ಉತ್ತರ ನೀಡಿದ್ದಾರೆ’ ಎಂದು ಜೆಡಿಎಸ್‌ನ ಮರಿತಿಬ್ಬೇಗೌಡ ಪ್ರತಿಕ್ರಿಯಿಸಿದರು. ಈ ಹಂತದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿ ಗದ್ದಲ ಆರಂಭಿಸಿದ್ದರಿಂದ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

ಮಧ್ಯಾಹ್ನದ ನಂತರವೂ ಧರಣಿ ಮುಂದುವರಿಸಿದಾಗ, ಈ ವಿಷಯದ ಬಗ್ಗೆ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಹೀಗಾಗಿ, ಬಿಜೆಪಿ ಸದಸ್ಯರು ಧರಣಿ ಅಂತ್ಯಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT