ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ಕಚೇರಿಗಳಲ್ಲಿ ‘ಮಳೆ ನೀರು ಸಂಗ್ರಹ‘ಕ್ಕೆ ಸೂಚನೆ

ಜಲಮಂಡಳಿ ಅಧಿಕಾರಿಗಳೊಂದಿಗೆ ಡಾ. ರಾಮ್‌ಪ್ರಸಾತ್ ಸಭೆ
Published 14 ಮೇ 2024, 18:27 IST
Last Updated 14 ಮೇ 2024, 18:27 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಶಾಲೆಗಳು, ಕಾಲೇಜುಗಳು, ಬಿಬಿಎಂಪಿ ಅಧೀನದ ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು, ಪಾರ್ಕ್‌ಗಳು, ಸರ್ಕಾರಿ ಕಟ್ಟಡಗಳಲ್ಲಿರುವ ಅಂಗನವಾಡಿಗಳು ಸೇರಿದಂತೆ ಸರ್ಕಾರಿ ಕಟ್ಟಡಗಳಲ್ಲಿ ಜಲಮಂಡಳಿಯ ವತಿಯಿಂದ ಮಳೆ ನೀರು ಸಂಗ್ರಹ ವ್ಯವಸ್ಥೆ ಹಾಗೂ ಇಂಗು ಗುಂಡಿಗಳನ್ನು ನಿರ್ಮಿಸಬೇಕು ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಗ್ಗೆ ಮಂಗಳವಾರ ಜಲಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಾರ್ವಜನಿಕರಿಗೆ ಮಾದರಿಯಾಗುವ ನಿಟ್ಟಿನಲ್ಲಿ ಈಗಾಗಲೇ ಜಲಮಂಡಳಿಯ ವತಿಯಿಂದ 1000ಕ್ಕೂ ಹೆಚ್ಚು ಕಡೆಗಳಲ್ಲಿ ಇಂಗುಗುಂಡಿಗಳನ್ನು ನಿರ್ಮಿಸಿದೆ. ಇನ್ನೂ ಒಂದು ಸಾವಿರ ಇಂಗುಗುಂಡಿಗಳನ್ನು ನಿರ್ಮಿಸಲಿದೆ ಎಂದು ಹೇಳಿದರು.

ಮಳೆ ನೀರು ಸಂಗ್ರಹ ಪದ್ದತಿ ಅಳವಡಿಕೆ ಮತ್ತು ಇಂಗುಗುಂಡಿಗಳನ್ನು ನಿರ್ಮಿಸುವ ಜೊತೆಯಲ್ಲೇ, ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಇದರಿಂದ ಇಂಗುಗುಂಡಿ ಉಪಯೋಗದ ಬಗ್ಗೆ ಸಾರ್ವಜನಿಕರು ಮಾಹಿತಿ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲೂ ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅಳವಡಿಸಿ ವಿದ್ಯಾರ್ಥಿಗಳಿಗೆ ಈ ಬಗ್ಗೆ ಪ್ರಾತ್ಯಕ್ಷಿಕೆ ನೀಡಬೇಕು. ವಲಯವಾರು ಪ್ರದೇಶಗಳಲ್ಲಿ ಎಲ್ಲಾ ಧಾರ್ಮಿಕ ಸಂಸ್ಥೆಗಳ ಆವರಣದಲ್ಲೂ ಮಂಡಳಿ ವತಿಯಿಂದ ಮಳೆ ನೀರು ಸಂಗ್ರಹ ಪದ್ದತಿಯನ್ನು ಅಳವಡಿಸಲಾಗುವುದು. ಇದರ ಮೂಲಕ ಆಯಾ ಸ್ಥಳಗಳಿಗೆ ಭೇಟಿ ನೀಡುವಂತಹ ಜನರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ನೀರಿನ ಸದ್ಬಳಕೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದರು.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿಯೂ ಮಳೆ ನೀರು ಸಂಗ್ರಹ ಹಾಗೂ ಇಂಗುಗುಂಡಿಗಳನ್ನು ಮಾಡಬೇಕು ಎಂದು ತಿಳಿಸಿದರು.

ಪ್ರಧಾನ ಮುಖ್ಯ ಎಂಜನಿಯರ್ ಸುರೇಶ, ಮುಖ್ಯ ಎಂಜನಿಯರ್‌ಗಳಾದ ಎಲ್. ಕುಮಾರ ನಾಯ್ಕ್‌, ಕೆ.ಎನ್. ಪರಮೇಶ, ಎಸ್.ವಿ. ವೆಂಕಟೇಶ, ಎ.ರಾಜಶೇಖರ್, ಮಹೇಶ ಕೆ.ಎನ್., ರಾಜೀವ್ ಕೆ.ಎನ್., ಗಂಗಾಧರ್ ಬಿ.ಸಿ., ದೇವರಾಜು ಎಂ., ಜಯಶಂಕರ್, ಹೆಚ್ಚುವರಿ ಮುಖ್ಯ ಎಂಜಿನಿಯರ್ ಮಧುಸೂದನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT