ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರಿನಲ್ಲಿ ಎನ್‌ಎಸ್‌ಐಸಿ ಕೌಶಲಾಭಿವೃದ್ಧಿ ಕೇಂದ್ರ: ಶೋಭಾ ಕರಂದ್ಲಾಜೆ

Published 16 ಆಗಸ್ಟ್ 2024, 15:53 IST
Last Updated 16 ಆಗಸ್ಟ್ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ‘ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ (ಎಂಎಸ್‌ಎಂಇ) ಕೈಗಾರಿಕೆಗಳಿಗೆ ಅಗತ್ಯವಿರುವ ನುರಿತ ಕಾರ್ಮಿಕರನ್ನು ಒದಗಿಸಲು ಕೇಂದ್ರ ಸರ್ಕಾರವು ಬೆಂಗಳೂರಿನಲ್ಲಿ ರಾಷ್ಟ್ರೀಯ ಸಣ್ಣ ಕೈಗಾರಿಕಾ ನಿಗಮ(ಎನ್‌ಎಸ್‌ಐಸಿ)ದ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಉದ್ದೇಶಿಸಿದೆ’ ಎಂದು ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಶುಕ್ರವಾರ ಆಯೋಜಿಸಿದ್ದ 19ನೇ ರಫ್ತು ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಎನ್‌ಎಸ್‌ಐಸಿ ಸ್ಥಾಪನೆಗೆ ಕುರಿತು ಸಂಬಂಧಿಸಿದ ಕೇಂದ್ರ ಸಚಿವರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ತ್ವರಿತವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಎಫ್‌ಕೆಸಿಸಿಐ ಆರಂಭಿಸಲು ಉದ್ದೇಶಿಸಿರುವ ಕೌಶಲಾಭಿವೃದ್ಧಿ ಕೇಂದ್ರಕ್ಕೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

‘ಪ್ರಾದೇಶಿಕ ಅಭಿವೃದ್ಧಿಯನ್ನು ಉತ್ತೇಜಿಸಲು ಬೆಂಗಳೂರು ಹೊರತುಪಡಿಸಿ, ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲೂ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಆಯಾ ಜಿಲ್ಲೆಗಳಲ್ಲಿರುವ ಮೂಲ ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಕೈಗಾರಿಕೆಗಳನ್ನು ಸ್ಥಾಪಿಸಿದರೆ, ಸ್ಥಳೀಯರಿಗೆ ಉದ್ಯೋಗ ನೀಡಬಹುದು’ ಎಂದು ಹೇಳಿದರು.

ಸಮಾರಂಭದಲ್ಲಿ 36 ರಫ್ತುದಾರಿಗೆ ಪ್ರಶಸ್ತಿ ಪ್ರದಾನ‌ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್‌ ಚಂದ್ರ ಲಹೋಟಿ, ನಿಯೋಜಿತ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷೆ ಉಮಾರೆಡ್ಡಿ, ನಿಕಟಪೂರ್ವ ಅಧ್ಯಕ್ಷ ಬಿ ವಿ ಗೋಪಾಲ್‌ ರೆಡ್ಡಿ ಮತ್ತು ಎಫ್‌ಕೆಸಿಸಿಐನ ರಫ್ತು ಶ್ರೇಷ್ಠತಾ ಸಮಿತಿ ಅಧ್ಯಕ್ಷ ಬಿ.ಸಿ.ತಿಪ್ಪೇಶಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT