ಶನಿವಾರ, ಜುಲೈ 31, 2021
21 °C
ಸೋಂಕಿತರ ನೆರವಿಗೆ 300 ಆಂಬುಲೆನ್ಸ್‌

ಜನ ಆತಂಕ ಪಡುವ ಅಗತ್ಯವಿಲ್ಲ: ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್‌.ಪುರ: ‘ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಟಿಬದ್ಧವಾಗಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ ಪೂರ್ವ ವಲಯದ ವ್ಯಾಪ್ತಿಯಲ್ಲಿ ಕೋವಿಡ್‌–19 ಸಂಬಂಧಿತ ಕ್ರಮಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. 

‘ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಹಕಾರದಿಂದ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಚಿಕಿತ್ಸೆ ನೀಡಲು ಶ್ರಮಿಸಲಾಗುತ್ತಿದೆ. ಯಾವುದೇ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಉಂಟಾಗದಂತೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ’ ಎಂದರು.

‘ನಾಗವಾರದ ಡಾ.ಬಿ.ಆರ್. ಅಂಬೇಡ್ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗಾಗಿ 500 ಹಾಸಿಗೆ ವ್ಯವಸ್ಥೆ ಮಾಡುವುದರ ಜೊತೆಗೆ, ನಗರದ 300 ಕ್ಕೂ ಹೆಚ್ಚು ಆಂಬುಲೆನ್ಸ್‌ಗಳನ್ನು ಸೋಂಕಿತರ ಚಿಕಿತ್ಸೆಗೆ ಬಳಸಲು ಪ್ರಯತ್ನಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಕೋವಿಡ್ ವಾರ್ ರೂಮ್‌ನಲ್ಲಿ ಕ್ಷೇತ್ರದ ಚಿತ್ರಣ ದೊರಕುವಂತಾಗಬೇಕು. ಹಿರಿಯ ಅಧಿಕಾರಿಗಳು ಸಮಸ್ಯೆ ಇರುವುದನ್ನು ಗಮನಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ವಜ್ಞನಗರ, ಶಿವಾಜಿನಗರ, ಶಾಂತಿನಗರ ವಿಧಾನ ಸಭಾ ಕ್ಷೇತ್ರಗಳ ಕೋವಿಡ್ ಆಸ್ಪತ್ರೆ ವಾರ್ ರೂಂ ಹಾಗೂ ಫೀವರ್ ಕ್ಲಿನಿಕ್ ಗಳ ಸ್ಥಳ ಪರಿಶೀಲನೆ ನಡೆಸಿದರು. 

ಆಸ್ಪತ್ರೆಗೆ ಮೀಸಲಿಡಲು ಮನವಿ: ‘ಅಂಬೇಡ್ಕರ್ ಕಾಲೇಜಿನಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯದ ವ್ಯವಸ್ಥೆ ಮಾಡಬೇಕು’ ಎಂದು ಶಾಸಕ ಕೆ.ಜೆ. ಜಾರ್ಜ್ ಹೇಳಿದರು. 

ನಾಗವಾರದ ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಹಾಗೂ ಕೆ.ಜಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಫೀವರ್ ಕ್ಲಿನಿಕ್, ಎಚ್.ಬಿ.ಆರ್ ಬಡಾವಣೆಯ ರಾಮಮಂದಿರ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಆಸ್ಪತ್ರೆ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಮೋಹನ್, ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್, ವಿಧಾನ ಪರಿಷತ್ ಸದಸ್ಯ ಎಚ್‌.ಎಂ.ರಮೇಶ್ ಗೌಡ, ಪಾಲಿಕೆ ಸದಸ್ಯರಾದ, ಪದ್ಮನಾಭ ರೆಡ್ಡಿ ನಂದಾ, ವಸಂತ ಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು