ಬೆಂಗಳೂರು: ‘ಸಾಮಾಜಿಕ ಮಾಧ್ಯಮಗಳಲ್ಲಿ ಬರಹ ಪ್ರಕಟಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ’ ಎಂಬ ಆರೋಪದಡಿ ಬಂಧಿಸಲಾಗಿದ್ದ ನಟ ಎ. ಚೇತನ್ ಕುಮಾರ್ ಅವರಿಗೆ ನಗರದ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.
‘ಚೇತನ್ ಅವರು ಹಿಂದೂ ಧರ್ಮದ ಬಗ್ಗೆ ಫೇಸ್‌ಬುಕ್ ಹಾಗೂ ಟ್ವಿಟರ್ ಖಾತೆಗಳಲ್ಲಿ ಬರಹ ಪ್ರಕಟಿಸಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ’ ಎಂದು ಆರೋಪಿಸಿ ಶಿವಕುಮಾರ್ ಎಂಬುವರು ದೂರು ನೀಡಿದ್ದರು.
ಎಫ್‌ಐಆರ್ ದಾಖಲಿಸಿಕೊಂಡಿದ್ದ ಶೇಷಾದ್ರಿಪುರ ಪೊಲೀಸರು, ಚೇತನ್ ಅವರನ್ನು ಮಾರ್ಚ್ 21ರಂದು ಬಂಧಿಸಿದ್ದರು. ನಂತರ, ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.
ಜಾಮೀನು ಕೋರಿ ಚೇತನ್ ಪರ ವಕೀಲರು 32ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೆ.ಲತಾ ಅವರು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ₹ 25 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ನೀಡಬೇಕು ಹಾಗೂ ತನಿಖೆಗೆ ಸಹಕರಿಸಬೇಕೆಂಬ ಷರತ್ತುಗಳನ್ನು ವಿಧಿಸಲಾಗಿದೆ.