ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಕ್ವಿಜ್ ವಿಜೇತರಿಗೆ ರಾಜ್ಯಪಾಲರಿಂದ ಅಭಿನಂದನೆ

Published 19 ಡಿಸೆಂಬರ್ 2023, 16:13 IST
Last Updated 19 ಡಿಸೆಂಬರ್ 2023, 16:13 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಇಲ್ಲಿನ ರಾಜಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ‘ಪ್ರಜಾವಾಣಿ’ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯ ವಿಜೇತರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಭಿನಂದಿಸಿದರು. 

ಈ ಸಮಾರಂಭದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಶಾಲಾ ಪಠ್ಯದ ಜತೆಗೆ ಕಲೆ, ಕ್ರೀಡೆಯಂತಹ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇಂತಹ ಚಟುವಟಿಕೆಗಳಿಂದ ದೈಹಿಕ ಮತ್ತು ಮಾನಸಿಕ ಸದೃಢತೆ ಬೆಳೆಯಲಿದೆ. ರಸಪ್ರಶ್ನೆ ಸ್ಪರ್ಧೆಗಳು ರಾಷ್ಟ್ರೀಯ ಏಕತೆ, ಕೋಮು ಸೌಹಾರ್ದತೆ, ಸಹೋದರತ್ವ, ಶೌರ್ಯ ಹಾಗೂ ಧೈರ್ಯಕ್ಕೆ ಸಹಕಾರಿಯಾಗಲಿದೆ’ ಎಂದು ಕಿವಿಮಾತು ಹೇಳಿದರು.

‘ರಸಪ್ರಶ್ನೆ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಜಾಗೃತಗೊಳಿಸುತ್ತವೆ. ದೇಶಭಕ್ತಿ, ನೈತಿಕ ಪ್ರಜ್ಞೆ ಬೆಳೆಸುವ ಜತೆಗೆ, ಸ್ವಾವಲಂಬಿಯಾಗಲು ಸಹಕಾರಿಯಾಗಿವೆ’ ಎಂದು ತಿಳಿಸಿದರು. 

‘ಪ್ರಶಸ್ತಿ ಪಡೆದ ಎಲ್ಲ ವಿದ್ಯಾರ್ಥಿಗಳು ಇದೇ ರೀತಿ ಸಾಧನೆಯನ್ನು ಮುಂದುವರಿಸಬೇಕು. ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಿ, ವಿಶ್ವ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಬೇಕು’ ಎಂದು ಕರೆ ನೀಡಿದರು.

‘ಜೀವನ ಕೌಶಲ, ವ್ಯಕ್ತಿತ್ವ ವಿಕಸನದ ಬಗ್ಗೆ ಮೌಲ್ಯಾಧಾರಿತ ಕಾರ್ಯಕ್ರಮಗಳು ಹಾಗೂ ನಾಯಕತ್ವ ತರಬೇತಿ ಕೋರ್ಸ್‌ಗಳನ್ನು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ನಡೆಸುತ್ತಿರುವುದು ಶ್ಲಾಘನೀಯ. ಈ ಮಹತ್ವದ ಕಾರ್ಯಕ್ರಮವು ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಸಾಮಾಜಿಕ ಪ್ರಗತಿಗೆ ವೇದಿಕೆ ಒದಗಿಸಿದೆ. ಇದಕ್ಕಾಗಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಬಳಗವನ್ನು ಅಭಿನಂದಿಸುತ್ತೇನೆ’ ಎಂದು ಹೇಳಿದರು.

‘ಪ್ರಜಾವಾಣಿ ರಸಪ್ರಶ್ನೆ ಸ್ಪರ್ಧೆಯಲ್ಲಿ 800ಕ್ಕೂ ಹೆಚ್ಚು ಶಾಲೆಗಳ 1,500 ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ಸಂಗತಿ. ವಿಜ್ಞಾನ, ಸಮಾಜ ವಿಜ್ಞಾನ, ಭೂಗೋಳ, ಇತಿಹಾಸ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ನಮ್ಮ ರಾಜ್ಯದ ವಿದ್ಯಾರ್ಥಿಗಳ ಬುದ್ಧಿವಂತಿಕೆ ಪರೀಕ್ಷಿಸಿದ ಉತ್ತಮ ಕಾರ್ಯಕ್ರಮ ಇದಾಗಿದೆ’ ಎಂದು ಶ್ಲಾಘಿಸಿದರು.

ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮನ್ ಶಂಕರ್ ಹಾಗೂ ‘ಪ್ರಜಾವಾಣಿ’ ಡೆಪ್ಯುಟಿ ಎಡಿಟರ್‌ ಎಂ.ನಾಗರಾಜ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT