ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್‌ ಪ್ರಕರಣ | ಸ್ವತಂತ್ರ ತನಿಖೆ ಕೋರಿಕೆ: ಅರ್ಜಿ ವಿಲೇವಾರಿ

Published 12 ಜೂನ್ 2024, 14:51 IST
Last Updated 12 ಜೂನ್ 2024, 14:51 IST
ಅಕ್ಷರ ಗಾತ್ರ

ಬೆಂಗಳೂರು:‘ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ವಿಲೇವಾರಿ ಮಾಡಿದೆ.

ಈ ಸಂಬಂಧ ‘ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ’ದ (ಕೆಆರ್‌ಎಸ್‌ಪಿ) ಉಪಾಧ್ಯಕ್ಷ ಎಸ್‌.ಎಚ್‌.ಲಿಂಗೇಗೌಡ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್‌, ‘ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕೆಆರ್‌ಎಸ್‌ ಪಕ್ಷವು, ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಆದರೆ, ಹೊಳೆನರಸೀಪುರ ಪೊಲೀಸರು, ‘ಈಗಾಗಲೇ ದೂರು ದಾಖಲಾಗಿದ್ದು, ಮತ್ತೊಂದು ದೂರು ದಾಖಲಿಸಿಕೊಳ್ಳುವುದಿಲ್ಲ’ ಎಂಬ ಹಿಂಬರಹ ನೀಡಿದ್ದರು. ‘ಈ ಹಿಂಬರಹವನ್ನು ರದ್ದುಪಡಿಸಿ ದೂರು ದಾಖಲಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಎಸ್‌ಐಟಿ ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅವಶ್ಯಕತೆ ಇಲ್ಲ. ಅರ್ಜಿದಾರರಿಗೆ ಏನಾದರೂ ಕುಂದುಕೊರತೆ ಇದ್ದರೆ, ಅದರ ಬಗ್ಗೆ ಎಸ್‌ಐಟಿಯಲ್ಲೇ ದಾಖಲಿಸಿ ಅಲ್ಲಿಯೇ ಪರಿಹಾರ ಪಡೆಯಬಹುದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ಇತ್ಯರ್ಥಗೊಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT