ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ್‌ ಪರ ಘೋಷಣೆ: ವಿಧಾನಸೌಧದಲ್ಲಿ ಮಹಜರು

Published 5 ಮಾರ್ಚ್ 2024, 23:30 IST
Last Updated 5 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ’ ಎಂದು ಆರೋಪಿಸಲಾದ ಪ್ರಕರಣದಡಿ ಸೋಮವಾರ ಬಂಧಿಸಲಾಗಿರುವ ಮೂವರು ಆರೋಪಿಗಳನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ನ್ಯಾಯಾಧೀಶರ ಎದುರು ಸೋಮವಾರ ರಾತ್ರಿ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರಿದ್ದರು. ಮನವಿ ಪುರಸ್ಕರಿಸಿದ್ದ ನ್ಯಾಯಾಧೀಶರು, ಆರೋಪಿಗಳನ್ನು ಪೊಲೀಸರ ಕಸ್ಟಡಿಗೆ ವಹಿಸಿ ಆದೇಶಿಸಿದರು.

ಸೋಮವಾರ ರಾತ್ರಿಯೇ ಆರೋಪಿಗಳನ್ನು ಕಸ್ಟಡಿಗೆ ಪಡೆದಿರುವ ವಿಧಾನಸೌಧ ಠಾಣೆ ಪೊಲೀಸರು, ಮೂವರ ವಿಚಾರಣೆ ಮುಂದುವರಿಸಿದ್ದಾರೆ. ಮಂಗಳವಾರ ಆರೋಪಿಗಳನ್ನು ವಿಧಾನಸೌಧಕ್ಕೆ ಕರೆದೊಯ್ದು, ಘಟನಾ ಸ್ಥಳದಲ್ಲಿ ಮಹಜರು ನಡೆಸಿದರು.

‘ದೆಹಲಿ ಕಿಶನ್‌ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಹಮ್ಮದ್ ನಾಶಿಪುಡಿ, ಬೆಂಗಳೂರು ಜಯಮಹಲ್‌ನ ಮುನಾವರ್ ಅಹ್ಮದ್‌ನಿಂದ ಪ್ರಕರಣ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಬೇಕಿದೆ. ಹೀಗಾಗಿ, ಕಸ್ಟಡಿಗೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ. ಕಾನೂನು ಅನ್ವಯ ಮಹಜರು ಪ್ರಕ್ರಿಯೆ ನಡೆಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರೋಪಿ ಮೊಹಮ್ಮದ್ ಇಲ್ತಾಜ್, ಯೂತ್ ಕಾಂಗ್ರೆಸ್ ರಾಷ್ಟ್ರೀಯ ಘಟಕದ ಸಂಯೋಜಕ ಎಂಬುದು ತನಿಖೆಯಿಂದ ಗೊತ್ತಾಗಿದೆ. ರಾಜ್ಯಸಭಾ ಚುನಾವಣೆ ನಿಮಿತ್ತ ಈತ, ನಗರಕ್ಕೆ ಬಂದಿದ್ದ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೈಯ್ಯದ್ ನಾಸಿರ್‌ ಹುಸೇನ್‌ ಅವರ ಶಿಫಾರಸು ಮೂಲಕ ಪಾಸ್ ಪಡೆದುಕೊಂಡು ವಿಧಾನಸೌಧದೊಳಗೆ ಬಂದಿದ್ದ’ ಎಂದು ತಿಳಿಸಿವೆ.

ಮತ್ತಷ್ಟು ಮಂದಿ ವಿಚಾರಣೆ: ‘ವಿಧಾನಸೌಧದಲ್ಲಿ ಫೆ. 27ರಂದು ಸೈಯದ್ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಸಾಕಷ್ಟು ಮಂದಿ ಹಾಜರಿದ್ದರು. ಇವರ ಮಧ್ಯೆಯೇ ಆರೋಪಿಗಳು, ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ಸದ್ಯ ಮೂವರನ್ನು ಮಾತ್ರ ಗುರುತಿಸಲಾಗಿದೆ. ಉಳಿದವರ ಪತ್ತೆಗೆ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಇದೊಂದು ಗಂಭೀರ ಹಾಗೂ ಸೂಕ್ಷ್ಮ ಪ್ರಕರಣ. ಪುರಾವೆಗಳನ್ನು ಆಧರಿಸಿ ಮತ್ತಷ್ಟು ಮಂದಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕವೇ ಘೋಷಣೆ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ’ ಎಂದು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT