ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬೇಡಿಕೆ ಈಡೇರಿಸದಿದ್ದರೆ ಆತ್ಮಾರ್ಪಣೆಗೂ ಸಿದ್ಧ’

ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ಪ್ರತಿಭಟನೆ
Last Updated 23 ಜುಲೈ 2022, 16:31 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಕರ್ನಾಟಕ ಬೇಡಜಂಗಮ ಸಂಘಟನೆಗಳ ಒಕ್ಕೂಟದಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ‘ಸತ್ಯ ಪ್ರತಿಪಾದನಾ ಸತ್ಯಾಗ್ರಹ’ ಶನಿವಾರವೂ ಮುಂದುವರಿಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸಮುದಾಯದ ಜನ ಹಾಗೂ ಸ್ವಾಮೀಜಿಗಳು ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಸ್ವಾಮೀಜಿಗಳ ಸಮ್ಮುಖದಲ್ಲಿ ಪ್ರಮುಖ ನಿರ್ಣಯ ಕೈಗೊಂಡ ಒಕ್ಕೂಟದ ಮುಖಂಡರು, ‘ಆಗಸ್ಟ್ 15ರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ, ಒಕ್ಕೂಟದ ಅಧ್ಯಕ್ಷ ಬಿ.ಡಿ. ಹಿರೇಮಠ ಆತ್ಮಾರ್ಪಣೆಗೂ ಸಿದ್ಧರಿದ್ದಾರೆ’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕಲ್ಯಾಣ ಸಮಿತಿ ವಿರುದ್ಧ ಮೊಕದ್ದಮೆ: ‘ಬೇಡ ಜಂಗಮ ಪ್ರಮಾಣಪತ್ರ ಪಡೆಯುವುದು ಕಾನೂನುಬದ್ಧ ಹಕ್ಕು. ಆದರೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಸಮಿತಿ ಸದಸ್ಯರು, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಕಾನೂನುಬಾಹಿರವಾಗಿ ಪತ್ರ ಬರೆದಿದ್ದಾರೆ. ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಕಲ್ಯಾಣ ಸಮಿತಿ ವಿರುದ್ಧ ರಾಜ್ಯದ ಎಲ್ಲ ಜಿಲ್ಲಾ ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಲು ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಒಕ್ಕೂಟದ ಪದಾಧಿಕಾರಿಗಳು ಹೇಳಿದರು.

‘ಕಾನೂನುಬದ್ಧವಾಗಿ ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದವರು ಹಾಗೂ ಅದನ್ನು ನೀಡಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವುದನ್ನು ತಕ್ಷಣ ನಿಲ್ಲಿಸಬೇಕು. ಬೇಡ ಜಂಗಮರಲ್ಲದವರಿಗೆ ಜಾತಿ ಪ್ರಮಾಣ ನೀಡಿದರೆ, ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಅಭ್ಯಂತರವಿಲ್ಲ’ ಎಂದು ತಿಳಿಸಿದರು.

‘ಬೇಡ ಜಂಗಮ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕೈಬಿಟ್ಟಿರುವ ಬೇಡ ಜಂಗಮ ಜಾತಿಯನ್ನು ಪುನಃ ಸೇರ್ಪಡೆ ಮಾಡಬೇಕು’ ಎಂದೂ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT