ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ತಿರುವು; ಕಾಲೇಜಿಗೆ ದಿಢೀರ್‌ ರಜೆ

Last Updated 10 ಜನವರಿ 2020, 19:08 IST
ಅಕ್ಷರ ಗಾತ್ರ

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಪರ ಸಹಿ ಸಂಗ್ರಹಿಸುವುದಕ್ಕಾಗಿ ಬಿಜೆಪಿ ಕಾರ್ಯಕರ್ತರು ಜ್ಯೋತಿ ನಿವಾಸ್ ಮಹಿಳಾ ಕಾಲೇಜಿನ ಗೋಡೆಗೆ ಬ್ಯಾನರ್‌ ಅಂಟಿಸಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಕಾಲೇಜಿಗೆ ದಿಢೀರ್‌ ಆಗಿ ರಜೆ ಘೋಷಿಸಲಾಗಿದೆ.

‘ಪ್ರಕರಣವು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರಕರಣವನ್ನು ತಿಳಿಗೊಳಿಸುವ ಉದ್ದೇಶದಿಂದ ಎರಡು ದಿನ ರಜೆ ನೀಡಲಾಗಿದೆ’ ಎಂದು ಕಾಲೇಜಿನ ಮೂಲಗಳು ತಿಳಿಸಿವೆ.

‘ಶುಕ್ರವಾರ ಹಾಗೂ ಶನಿವಾರ ಕಾಲೇಜು ಇರುವುದಿಲ್ಲ. ಭಾನುವಾರ ಪ್ರತಿ ವಾರದಂತೆ ರಜೆ ಇರಲಿದೆ. ಸೋಮವಾರವೇ ಕಾಲೇಜು ಪುನರಾರಂಭ ಆಗಲಿದೆ. ಅಂದಿನ ಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮೂಲಗಳು ಹೇಳಿವೆ.

ಅಜೀಂ ಪ್ರೇಮ್‌ಜೀ ಕ್ಯಾಂಪಸ್‌ನಲ್ಲಿ ಪ್ರತಿಭಟನೆ:ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಅಜೀಂ ಪ್ರೇಮ್‌ಜೀ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲೂ ಪ್ರತಿಭಟನೆ ನಡೆಯಿತು.

ಸರ್ಜಾಪುರ ಬಳಿ ಇರುವ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಗುರುವಾರ ಸೇರಿದ್ದ ಕೆಲ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು, ಕಾಯ್ದೆ ವಿರೋಧಿಸುವ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ‘ಕಾಯ್ದೆ ಮೂಲಕ ದೇಶ ಒಡೆಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೌನ ಪ್ರತಿಭಟನೆ

ಜೆಎನ್‌ಯು ಸೇರಿದಂತೆ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಸೇಂಟ್ ಜೋಸೆಫ್ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಹಳೇ ವಿದ್ಯಾರ್ಥಿಗಳು ಮೇಣದ ಬತ್ತಿ ಹಚ್ಚಿ ಶುಕ್ರವಾರ ಸಂಜೆ ಮೌನ ಪ್ರತಿಭಟನೆ ನಡೆಸಿದರು.

‘ವಿದ್ಯಾರ್ಥಿಗಳು ದೇಶದ ಭವಿಷ್ಯವಿದ್ದಂತೆ. ವಿದ್ಯಾರ್ಥಿಗಳ ಮೇಲೆ ನಡೆಯುವ ಹಲ್ಲೆಗಳು ಖಂಡನೀಯ’ ಎಂದು ವಿದ್ಯಾರ್ಥಿಗಳು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT