ಬುಧವಾರ, ಮಾರ್ಚ್ 22, 2023
32 °C

ಪ್ರತಿಭಟನೆ ಸ್ಥಳದಲ್ಲೇ ಧ್ವಜಾರೋಹಣ ನೆರವೇರಿಸಿದ ಅಂಗನವಾಡಿ ಕಾರ್ಯಕರ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗುರುವಾರ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಆಚರಿಸಿದರು.

‘ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ಶಿಕ್ಷಕಿಯರೆಂದು ಪರಿಗಣಿಸಬೇಕು. ಅನ್ನದ ಕೇಂದ್ರಗಳಾಗಿರುವ ಅಂಗನವಾಡಿಗಳನ್ನು ಅಕ್ಷರ ಕೇಂದ್ರಗಳಾಗಿ ಮಾರ್ಪಡಿಸಬೇಕು. ಗ್ರ್ಯಾಚ್ಯುಟಿ ಪಾವತಿಸಬೇಕು’ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಗುರುವಾರ ನಾಲ್ಕನೇ ದಿನ ಪೂರೈಸಿತು.

ಪ್ರತಿಭಟನಾ ಸ್ಥಳದಲ್ಲಿ ತಾತ್ಕಾಲಿಕ ಧ್ವಜದ ಕಂಬ ನಿರ್ಮಿಸಿದ್ದ ಪ್ರತಿಭಟನಕಾರರು, ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ಮಾಡಿ, ಸಂವಿಧಾನದ ಪೂರ್ವ ಪೀಠಿಕೆ ಪ್ರತಿ ಹಿಡಿದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್. ವಿಮಲಾ, ಸುರೇಂದ್ರನಾಥ್ (ಗುಂಡಣ್ಣ), ಪಂಚಮಿ ಗುಬ್ಬಿ, ಚಿಂತನ್ ವಿಕಾಸ್, ಸಿಐಟಿಯು ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಇದ್ದರು.

‘ಅಂಗನವಾಡಿ ಕೆಲಸಕ್ಕೆ ಗೈರಾಗಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ಯಾವುದೇ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸುತ್ತಿಲ್ಲ. ಗಣರಾಜ್ಯೋತ್ಸವ ದಿನದಂದೂ ನಾವೆಲ್ಲರೂ ಬೀದಿಯಲ್ಲಿ ಇರುವಂತಾಗಿದೆ’ ಎಂದು ವರಲಕ್ಷ್ಮಿ ಅಸಮಾಧಾನ ವ್ಯಕ್ತಪಡಿಸಿದರು.

‘ಯಾವುದೇ ಕಾರಣಕ್ಕೂ ನಾವು ಪ್ರತಿಭಟನೆ ಕೈಬಿಡುವುದಿಲ್ಲ. ಬೇಡಿಕೆ ಈಡೇರಿಸುವ ಬಗ್ಗೆ ಲಿಖಿತ ಭರವಸೆ ಸಿಗುವವರೆಗೂ ಉದ್ಯಾನ ಬಿಟ್ಟು ಹೋಗುವುದಿಲ್ಲ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು