ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ | ನಾಗೇಂದ್ರ, ಸಿದ್ದರಾಮಯ್ಯ ರಾಜೀನಾಮೆಗೆ ಅಶೋಕ ಆಗ್ರಹ

Published 1 ಜೂನ್ 2024, 15:56 IST
Last Updated 1 ಜೂನ್ 2024, 22:46 IST
ಅಕ್ಷರ ಗಾತ್ರ

ಬೆಂಗಳೂರು: ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಹಗರಣದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಪಡೆದರೆ ಸಾಲದು, ಹಣಕಾಸು ಖಾತೆ ಹೊಂದಿದ್ದರೂ ಹಗರಣ ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಆಗ್ರಹಿಸಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಮುಖ್ಯಮಂತ್ರಿಯವರು ಹಣಕಾಸು ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಆದರೂ, ನಾಗೇಂದ್ರ ಅವರ ರಾಜೀನಾಮೆ ಪಡೆಯದೆ ರಕ್ಷಿಸುತ್ತಿರುವುದು ಏಕೆ? ಹಗರಣದ ಹಣ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರಿಗೂ ತಲುಪಿದೆಯೇ’ ಎಂದು ಪ್ರಶ್ನಿಸಿದರು.

ಪರಿಶಿಷ್ಟರ ಕಲ್ಯಾಣಕ್ಕಾಗಿ ಇರಿಸಿದ್ದ ₹ 187 ಕೋಟಿಯನ್ನು ಕಾಂಗ್ರೆಸ್‌ನವರು ಲೂಟಿ ಮಾಡಿದ್ದಾರೆ. ಹೈದಾರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ಬ್ಯಾಂಕ್‌ನಲ್ಲಿ ಖಾತೆ ತೆರೆದು ಅಲ್ಲಿಗೆ ಅಕ್ರಮವಾಗಿ ಹಣ ವರ್ಗಾಯಿಸಿದರೆ ಯಾರಿಗೂ ತಿಳಿಯುವುದಿಲ್ಲ ಎಂದು ಭಾವಿಸಿದ್ದರು. ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿ, ಒಬ್ಬ ಸೂಪರ್‌ ಮುಖ್ಯಮಂತ್ರಿ ಇದ್ದಾರೆ. ಅದರಿಂದಾಗಿ ಇಂತಹ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದರು.

‘ಮುಖ್ಯಮಂತ್ರಿಯವರ ಬಳಿಯಲ್ಲೇ ಹಣಕಾಸು ಇಲಾಖೆ ಇದೆ. ಇಂತಹ ಹಗರಣ ನಡೆದಾಗ ಅವರಿಗೆ ತಿಳಿಯಲಿಲ್ಲವೆ? ಸಿದ್ದರಾಮಯ್ಯ ಅವರ ಮೂಗಿನಡಿಯಲ್ಲೇ ಹಗರಣ ನಡೆದಿದೆ. ಅದಕ್ಕೆ ಕಾಂಗ್ರೆಸ್‌ನ ದೆಹಲಿ ನಾಯಕರವರೆಗೂ ನಂಟಿದೆ. ಅದು ತನಿಖೆಯಲ್ಲಿ ಬಯಲಾಗಲಿದೆ’ ಎಂದರು.

‘ಕಾಂಗ್ರೆಸ್‌ ನಾಯಕರ ಹಿಂಬಾಲಕರ ಕಂಪನಿಗಳ ಖಾತೆಗಳಿಗೆ ನಿಗಮದ ಹಣ ವರ್ಗಾವಣೆ ಆಗಿದೆ. ಹಣ ವರ್ಗಾವಣೆಯಾಗಿರುವ ಐಟಿ ಕಂಪನಿಗಳು ಕಾಂಗ್ರೆಸ್ಸಿಗರ ಹಿಂಬಾಲಕರವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ದಾಖಲೆ ಸಹಿತ ಮಾಹಿತಿ ನೀಡಲಾಗಿದೆ. ಕಾನೂನು ವ್ಯಾಪ್ತಿಯಲ್ಲಿ ಪ್ರಬಲವಾದ ಹೋರಾಟ ನಡೆಸಲು ಬಿಜೆಪಿ ಸಿದ್ಧವಾಗಿದೆ’ ಎಂದು ಹೇಳಿದರು.

ಸಿಬಿಐ ತನಿಖೆ ನಡೆದರೆ ಸಿಕ್ಕಿಬೀಳುವ ಆತಂಕ ಸರ್ಕಾರದಲ್ಲಿರುವವರಿಗೆ ಇದೆ. ಆ ಕಾರಣಕ್ಕಾಗಿಯೇ ಹಗರಣ ಮುಚ್ಚಿ ಹಾಕಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಪ್ರಕರಣದ ತನಿಖೆಯನ್ನು ತಕ್ಷಣ ಸಿಬಿಐಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.

ಸಿಬಿಐ ತನಿಖೆಗೆ ಆಗ್ರಹಿಸಿ ಯತ್ನಾಳ ಪತ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಶನಿವಾರ ಪತ್ರ ಬರೆದಿದ್ದಾರೆ. ‘ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕಿದೆ. ಹಗರಣದ ತನಿಖೆಯನ್ನು ನಡೆಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಅಧಿಕಾರಿಗಳು ಈಗಾಗಲೇ ಸಿಬಿಐ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಿ ಕಾನೂನು ಕ್ರಮದ ವ್ಯಾಪ್ತಿಗೆ ಒಳಪಡಿಸಲು ಅನುಕೂಲವಾಗುವಂತೆ ತಕ್ಷಣವೇ ಸಿಬಿಐ ತನಿಖೆಗೆ ಆದೇಶಿಸಬೇಕು’ ಎಂದು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಅಕ್ರಮಕ್ಕೆ ಸಹಕರಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರುವುದು ಲಂಚ ಹಣಕಾಸು ಅವ್ಯವಹಾರಗಳ ಪ್ರಕರಣಗಳು ಹೆಚ್ಚುತ್ತಿವೆ. ಹಿರಿಯ ಅಧಿಕಾರಿಗಳು ಸಚಿವರ ಒತ್ತಡಗಳಿಂದಾಗಿಯೇ ಸರ್ಕಾರಿ ನೌಕರರು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹೆಚ್ಚುತ್ತಿದೆ ಎಂದು ಪತ್ರದಲ್ಲಿ ದೂರಿದ್ದಾರೆ.

‘ರಾಹುಲ್‌ ಗಾಂಧಿ ಪಾತ್ರ ಮುಚ್ಚಿಡಲು ಯತ್ನ’

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಹಗರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೂ ಪಾಲು ಹೋಗಿದೆ. ಅದನ್ನು ಮುಚ್ಚಿಡಲು ರಾಜ್ಯದ ಕಾಂಗ್ರೆಸ್‌ ಸರ್ಕಾರ ಪ್ರಯತ್ನಿಸುತ್ತಿದೆ’ ಎಂದು ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಆರೋಪಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಿಗಮದ ಹಣ ಹಲವು ಖಾಸಗಿ ಖಾತೆಗಳಿಗೆ ವರ್ಗಾವಣೆ ಆಗಿದೆ. ಸರ್ಕಾರ ಮಾಹಿತಿ ಮುಚ್ಚಿಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರನ್ನು ವಜಾ ಮಾಡುವ ಧೈರ್ಯ ಇಲ್ಲ. ನಾನು ಮುಖ್ಯಮಂತ್ರಿ ಆಗಿದ್ದರೆ ಒಂದು ಕ್ಷಣವೂ ನಾಗೇಂದ್ರ ಅವರನ್ನು ಸಂಪುಟದಲ್ಲಿ ಉಳಿಸಿಕೊಳ್ಳುತ್ತಿರಲಿಲ್ಲ’ ಎಂದರು. ‘ಮಾತೆತ್ತಿದರೆ ಬಿಜೆಪಿ ವಿರುದ್ಧ ಶೇಕಡ 40ರಷ್ಟು ಕಮಿಷನ್‌ ಆರೋಪ ಮಾಡುತ್ತಿದ್ದ ಸಿದ್ದರಾಮಯ್ಯ ಈಗ ಏಕೆ ಮೌನವಾಗಿದ್ದಾರೆ? ಕರ್ನಾಟಕ ಕಾಂಗ್ರೆಸ್‌ನ ಎಟಿಎಂ ಆಗಿದೆ ಎಂಬುದು ಈಗ ಬಹಿರಂಗವಾಗಿದೆ. ಆಡಳಿತದಲ್ಲಿರುವವರ ಸೂಚನೆಯಂತೆಯೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ನಡೆದಿದೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT