ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಸ್ ಕೋರ್ಸ್‌: 10 ದಿನಗಳಲ್ಲಿ ಮನವಿ ಪರಿಗಣಿಸಲು ಹೈಕೋರ್ಟ್ ಸೂಚನೆ

Published 23 ಮೇ 2024, 16:31 IST
Last Updated 23 ಮೇ 2024, 16:31 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ರೇಸ್ ಕೋರ್ಸ್) ಕುದುರೆ ಪಂದ್ಯಾವಳಿಗಳ ಆಯೋಜನೆಗೆ ಅನುಮತಿ ಕೋರಿ ಸಲ್ಲಿಸಲಾಗಿರುವ ಮನವಿಯನ್ನು ಮುಂದಿನ 10 ದಿನಗಳಲ್ಲಿ ಕಾನೂನು ಬದ್ಧವಾಗಿ ಪರಿಗಣಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಕುದುರೆ ಪಂದ್ಯಗಳ ಆಯೋಜನೆಗೆ ಪರವಾನಗಿ ನೀಡದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ಟರ್ಫ್‌ ಕ್ಲಬ್ ಲಿಮಿಟೆಡ್, ಕರ್ನಾಟಕ ರೇಸ್ ಹಾರ್ಸ್ ಓನರ್ಸ್ ಅಸೋಸಿಯೇಷನ್ ಮತ್ತು ಕರ್ನಾಟಕ ಟ್ರೈನರ್ಸ್ ಆಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ‘ಕುದುರೆ ಪಂದ್ಯ ಆಯೋಜನೆ ಪರವಾನಗಿ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನೇತೃತ್ವದಲ್ಲಿ 2 ಗಂಟೆಗಳ ಕಾಲ ಚರ್ಚೆಯಾಗಿದೆ. ಈ ಸಂಬಂಧ ಇತರೆ ಪಾಲುದಾರರೊಂದಿಗೂ ಚರ್ಚೆ ನಡೆಸಬೇಕಾಗಿದ್ದು, ಅಕ್ರಮಗಳ ತಡೆಗಾಗಿ ಕಾನೂನು ಬದ್ಧವಾಗಿ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಬೇಕಾಗಿದೆ. ಪಂದ್ಯಾವಳಿಯಲ್ಲಿ ಕೆಲ ಆಕ್ಷೇಪಾರ್ಹ ಚಟುವಟಿಕೆ ನಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಕಾರಣ ಪರವಾನಗಿ ನೀಡಿಕೆ ವಿಳಂಬವಾಗಿದೆ. ಅಕ್ರಮಗಳಿಗೆ ಕಡಿವಾಣ ಹಾಕಿ ಕಾನೂನು ಬದ್ಧ ಷರತ್ತು ವಿಧಿಸಿ ಪರವಾನಗಿ ನೀಡಬೇಕಾಗಿದ್ದು, ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಹೈಕೋರ್ಟ್ ವಕೀಲ ಶ್ರೀರಂಗ ಅವರು, ‘ರೇಸ್‌ ಕೋರ್ಸ್ ಆಡಳಿತ ಮಂಡಳಿಯಲ್ಲಿ ಸರ್ಕಾರದ ಹಣಕಾಸು ಕಾರ್ಯದರ್ಶಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸದಸ್ಯರಾಗಿದ್ದಾರೆ. ಕುದುರೆ ಪಂದ್ಯಗಳ ಆಯೋಜನೆಯ ಎಲ್ಲ ಚಟುವಟಿಕೆಗಳೂ ಸರ್ಕಾರದ ಗಮನಕ್ಕೆ ಬರುತ್ತವೆ. ಹೀಗಾಗಿ, ಅಕ್ರಮಗಳು ನಡೆಯುವ ಸಾಧ್ಯತೆಗಳು ಇಲ್ಲ’ ಎಂದು ಪ್ರತಿಪಾದಿಸಿದರು.

‘ಬೆಟ್ಟಿಂಗ್ ನಡೆಸಿದ ಆರೋಪ ಹೊತ್ತ ಬುಕ್ಕಿಗಳ ಪರವಾನಗಿ ರದ್ದು ಪಡಿಸುವುದಕ್ಕಾಗಿ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕುದುರೆ ಪಂದ್ಯಗಳ ಆಯೋಜನೆಯಲ್ಲಿ ಬುಕ್ಕಿ ಕಂಪನಿಗಳಿಗೆ ಯಾವುದೇ ಸಂಬಂಧವಿರುವುದಿಲ್ಲ’ ಎಂದರು.

ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ಅಡ್ವೊಕೇಟ್ ಜನರಲ್ ಅವರ ವಾದಕ್ಕೆ ಪ್ರತಿಕ್ರಿಯಿಸಿ, ‘ನಾಲ್ಕು ವಾರಗಳ ಕಾಲಾವಕಾಶ ವಿಳಂಬವಾಗಲಿದೆ. ಆದ್ದರಿಂದ ಮುಂದಿನ 10 ದಿನಗಳಲ್ಲಿ ಅರ್ಜಿದಾರರ ಮನವಿಯನ್ನು ಪರಿಗಣಿಸಿ’ ಎಂದು ಸೂಚಿಸಿ ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT