ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಎಫ್‌ಐಆರ್ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ನೀಡಿದ ದೂರು ಆಧರಿಸಿ, ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ.
‘ವಿಚಾರಣೆಗೆ ಹಾಜರಾಗುವಂತೆ ಯತ್ನಾಳ ಅವರಿಗೆ ನೋಟಿಸ್ ಜಾರಿ ಮಾಡಲಾಗುವುದು. ಹೇಳಿಕೆ ದಾಖಲು ಮಾಡಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.
‘ರಾಹುಲ್ ಗಾಂಧಿ ಅವರ ಬಗ್ಗೆ ಕೀಳು ಪದ ಬಳಸಿ ಮಾತನಾಡಿದ್ದಾರೆ. ಧರ್ಮಗಳ ಹೆಸರು ಪ್ರಸ್ತಾಪಿಸಿ ಅವಹೇಳನ ಮಾಡಿದ್ದಾರೆ. ಅವರ ಹೇಳಿಕೆಯೂ ಅನೇಕ ಮಾಧ್ಯಮದಲ್ಲೂ ಪ್ರಸಾರವಾಗಿದೆ. ಅಲ್ಲದೇ ಕೋಮು ಗಲಭೆ ಸೃಷ್ಟಿಸುವಂತೆಯೂ ಹೇಳಿಕೆ ನೀಡಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.