ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ರೈತ ಸಂಘ ಆಗ್ರಹ

Last Updated 28 ಜನವರಿ 2023, 16:34 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು. ಇದು ನಮ್ಮ ಕೊನೆಯ ಮನವಿ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಿಳಿಸಿದೆ.

‘ಕೇಂದ್ರ ಸರ್ಕಾರ ಈಗಾಗಲೇ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಬೆಂಗಳೂರು ಮತ್ತು ಬೆಳಗಾವಿ ಅಧಿವೇಶನದಲ್ಲಿ ಹಿಂಪಡೆಯಲಾಗುವುದು ಎಂಬ ಭರವಸೆ ನೀಡುತ್ತಿದ್ದು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಈ ಕಾಯ್ದೆಗಳನ್ನು ಮುಂದುವರಿಸಬೇಕು ಎಂದು ಸರ್ಕಾರದ ಮೇಲೆ ಯಾರಾದರೂ ಒತ್ತಡ ಹಾಕುತ್ತಿದ್ದಾರಾ? ಅಥವಾ ರೈತರನ್ನು ಕೃಷಿ ಕ್ಷೇತ್ರದಿಂದ ಹೊರಗಿಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆಯೇ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಈಗಾಗಲೇ ಎಪಿಎಂಸಿ ಕಾಯ್ದೆಯಿಂದ ಶೇ 90ರಷ್ಟು ಕೃಷಿ ಮಾರುಕಟ್ಟೆ ನಿರ್ಜೀವಗೊಂಡಿದೆ. ಕಂದಾಯ ಕಾಯ್ದೆ ನೀತಿಯಿಂದಾಗಿ ಪ್ರತಿದಿನ ರೈತರು ಕೃಷಿ ಭೂಮಿಯನ್ನು ಕಳೆದುಕೊಂಡು, ಕೃಷಿ ಕ್ಷೇತ್ರದಿಂದಲೇ ವಂಚಿತರಾಗುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಮಾತ್ರ ಧರ್ಮದ ಹೆಸರಿನಲ್ಲಿ ಜಾನುವಾರು ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಇದರಿಂದ ರೈತರು ಪಶುಪಾಲನೆ, ಹೈನುಗಾರಿಕೆ ಮಾಡುವುದು ಕಷ್ಟವಾಗಿದೆ’ ಎಂದು ಹೇಳಿದರು.

‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೈನುಗಾರಿಕೆಯನ್ನು ಕಾರ್ಪೊರೇಟ್‌ ಕಂಪನಿಗಳಿಗೆ ನೀಡುವ ಉತ್ಸಾಹ ತೋರಿಸುತ್ತಿದ್ದಾರೆ. ಆದ್ದರಿಂದಲೇ, ಮಂಡ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಮೂಲ್ ನೊಂದಿಗೆ ನಂದಿನಿಯನ್ನು ವಿಲೀನಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು’ ಎಂದರು.

‘ಜ. 31ರಂದು ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯುವ ರಾಜ್ಯ ರೈತ ಸಂಘದ ಕಾರ್ಯಕಾರಿ ಸಭೆಯಲ್ಲಿ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT