ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ರಾಜಕಾಲುವೆ ಒತ್ತುವರಿ ತೆರವು: ಬೈರತಿ ಬಸವರಾಜ

Last Updated 2 ಸೆಪ್ಟೆಂಬರ್ 2022, 20:08 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲೂ ರಾಜಕಾಲುವೆಗಳ ಒತ್ತುವರಿ ತೆರವಿಗೆ ಕಾರ್ಯಾಚರಣೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಪ್ರಭಾವಿ ವ್ಯಕ್ತಿಗಳು, ಕಂಪನಿಗಳು, ಬಿಲ್ಡರ್‌ಗಳು ರಾಜಕಾಲುವೆಗಳನ್ನು ಒತ್ತುವರಿ ಮಾಡಿರುವುದರಿಂದ ನಗರಗಳಲ್ಲಿ ದೊಡ್ಡ ಸಮಸ್ಯೆ ಸೃಷ್ಟಿಯಾಗುತ್ತಿದೆ. ನಗರಗಳಲ್ಲಿ ಮಳೆ ನೀರು ತುಂಬಿಕೊಂಡು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಒತ್ತುವರಿದಾರರು ಎಷ್ಟೇ ಪ್ರಭಾವಿಗಳಾಗಿದ್ದರೂ ಮಣಿಯದೆ ತೆರವು ಮಾಡಲಾಗುವುದು’ ಎಂದರು.

ಮಳೆಗಾಲ ಮುಗಿದ ತಕ್ಷಣವೇ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು. ಇದಕ್ಕಾಗಿ ಎಲ್ಲ ಮಹಾನಗರ ಪಾಲಿಕೆಗಳಿಗೂ ವಿಶೇಷ ಅನುದಾನ ಒದಗಿಸಲಾಗಿದೆ. ರಾಜಕಾಲುವೆಗಳ ಒತ್ತುವರಿ ಕುರಿತು ವರದಿ ಸಲ್ಲಿಸುವಂತೆ ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಹತ್ತು ಮಹಾನಗರ ಪಾಲಿಕೆಗಳ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಮಳೆಯಿಂದ ಯಾವ ಪ್ರದೇಶಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ ಎಂಬ ಮಾಹಿತಿ ಸರ್ಕಾರದ ಬಳಿ ವರದಿ ಇದೆ. ಮಹಾನಗರ ಪಾಲಿಕೆಗಳ ಆಯುಕ್ತರು ನೀಡುವ ವರದಿಯನ್ನು ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುವುದು. ಒತ್ತುವರಿಯಿಂದ ಸಾರ್ವಜನಿಕರಿಗೆ ತೊಂದರೆ ಆಗದಿರುವಂತಹ ಪ್ರಕರಣಗಳಲ್ಲಿ ತಕ್ಷಣವೇ ತೆರವು ಕಾರ್ಯಾಚರಣೆ ನಡೆಸುವುದಿಲ್ಲ ಎಂದರು.

‘ಬೆಂಗಳೂರನ್ನು ಕಾಪಾಡಿ’ ಎಂದು ಉದ್ಯಮಿ ಟಿ.ವಿ. ಮೋಹನದಾಸ್‌ ಪೈ ಮಾಡಿದ್ದ ಟ್ವೀಟ್‌ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ದೊಡ್ಡ ದೊಡ್ಡ ಕಂಪನಿಗಳೇ ರಾಜಕಾಲುವೆ ಒತ್ತುವರಿ ಮಾಡಿಕೊಂಡಿವೆ. ಒತ್ತುವರಿದಾರರೇ ಆಡಳಿತದ ವಿರುದ್ಧ ಪ್ಲೆಕಾರ್ಡ್‌ ಹಿಡಿದು ಪ್ರತಿಭಟನೆಯನ್ನೂ ನಡೆಸುತ್ತಾರೆ. ಇದನ್ನು ಮೋಹನ ದಾಸ್‌ ಪೈ ಅವರಂತಹ ಉದ್ಯಮಿಗಳು ಅರ್ಥ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT