ಶುಕ್ರವಾರ, ಅಕ್ಟೋಬರ್ 23, 2020
27 °C

ಜಾತಿ ಗಣತಿಯ ವರದಿ ಸ್ವೀಕರಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Siddaramaiah

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ರಾಜ್ಯ ಸರ್ಕಾರ ತಕ್ಷಣ ಸ್ವೀಕರಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಶನಿವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದುರ್ಬಲ ವರ್ಗಗಳಿಗೆ ನ್ಯಾಯ ನೀಡಲು ಪೂರಕವಾಗಿರುವ ವರದಿಯನ್ನು ಸ್ವೀಕರಿಸಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಿಂದೇಟು ಹಾಕುತ್ತಿದ್ದಾರೆ. ತಕ್ಷಣವೇ ವರದಿ ಸ್ವೀಕರಿಸದಿದ್ದರೆ ಒಕ್ಕೂಟ ಬೀದಿಗಿಳಿದು ಹೋರಾಟ ನಡೆಸಲಿದೆ. ನಾನು ಕೂಡ ಈ ಹೋರಾಟಕ್ಕೆ ಬೆಂಬಲ ನೀಡುತ್ತೇನೆ’ ಎಂದು ಘೋಷಿಸಿದರು.

1931ರ ನಂತರ ದೇಶದಲ್ಲಿ ಜಾತಿ ಆಧಾರಿತ ಜನಗಣತಿ ನಡೆದಿಲ್ಲ. ಇದರಿಂದಾಗಿ ಯಾವ ಜಾತಿಯ ಜನರ ಸಂಖ್ಯೆ ಎಷ್ಟು ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಾಗುತ್ತಿಲ್ಲ. ಮೀಸಲಾತಿ ಸೇರಿದಂತೆ ಜಾತಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜನಸಂಖ್ಯೆಯ ಖಚಿತ ಮಾಹಿತಿ ನೀಡುವಂತೆ ನ್ಯಾಯಾಲಯಗಳು ಸೂಚನೆ ನೀಡಿದಾಗ ಉತ್ತರ ನೀಡಲೂ ಸಾಧ್ಯವಾಗುತ್ತಿಲ್ಲ. ಈ ಎಲ್ಲ ತೊಡಕುಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಮೀಕ್ಷೆ ನಡೆಸಲಾಗಿತ್ತು ಎಂದರು.

‘ಹಿಂದುಳಿದ ವರ್ಗಗಳ ಆಯೋಗವು ₹ 162.77 ಕೋಟಿ ವೆಚ್ಚದಲ್ಲಿ ಸಮೀಕ್ಷೆ ನಡೆಸಿದೆ. ಇದಕ್ಕಾಗಿ 1.88 ಲಕ್ಷ ಸಿಬ್ಬಂದಿ ಶ್ರಮಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಸಮೀಕ್ಷೆ ಆರಂಭವಾಗಿತ್ತು. ಆದರೆ, ನಮ್ಮ ಅವಧಿಯಲ್ಲಿ ಪೂರ್ಣಗೊಳ್ಳಲಿಲ್ಲ. ಈ ಕಾರಣದಿಂದ ಆಗ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ’ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ವೀಕಾರಕ್ಕೆ ಹಿಂದೇಟು

ಹಿಂದಿನ ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಸಮೀಕ್ಷೆ ಪೂರ್ಣಗೊಂಡಿತು. ಆಗಿನ ಸರ್ಕಾರವೂ ಆಯೋಗದಿಂದ ವರದಿ ಪಡೆಯಲಿಲ್ಲ. ಬಿಜೆಪಿ ಸರ್ಕಾರ ಬರುತ್ತಿದ್ದಂತೆ ಆಯೋಗದ ಅಧ್ಯಕ್ಷರು, ಸದಸ್ಯರನ್ನು ವಜಾ ಮಾಡಲಾಯಿತು. ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್‌ ಅವರು ಆಯೋಗದ ಸದಸ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದರು. ಈಗ ಅದನ್ನು ಸ್ವೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.

‘ಮಂಡಲ್‌ ಆಯೋಗದ ವರದಿಗೂ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಈಗಲೂ ಅದೇ ಕೆಲಸ ಮಾಡುತ್ತಿದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ಬಿಜೆಪಿಯ ಬದ್ಧತೆ ಬಾಯಿಮಾತಿಗೆ ಸೀಮಿತ ಆಗಬಾರದು. ಯಾವುದೇ ಜಾತಿಯನ್ನು ಗುರಿಯಾಗಿಸಿಕೊಂಡು ಈ ವರದಿ ಸಿದ್ಧಪಡಿಸಿಲ್ಲ. ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಆಶಯದಂತೆ ಸಿದ್ಧವಾಗಿರುವ ವರದಿಯನ್ನು ಸ್ವೀಕರಿಸುವ ಬದ್ಧತೆಯನ್ನು ರಾಜ್ಯ ಸರ್ಕಾರ ಪ್ರದರ್ಶಿಸಬೇಕು’ ಎಂದು ಒತ್ತಾಯಿಸಿದರು.

ಮಾಜಿ ಸಚಿವ ಎಚ್.ಎಂ.ರೇವಣ್ಣ, ಒಕ್ಕೂಟದ ಗೌರವ ಅಧ್ಯಕ್ಷ  ಡಾ.ಬಿ.ಕೆ. ರವಿ, ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ, ಕಾರ್ಯಾಧ್ಯಕ್ಷ ಸುರೇಶ್ ಲಾತೂರ್, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ವೆಂಕಟರಾಮಯ್ಯ ಪತ್ರಿಕಾಗೋಷ್ಠಿಯಲ್ಲಿದ್ದರು.

ಇನ್ನಷ್ಟು...

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು