ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಲ್‌ಕೆಜಿ–ಯುಕೆಜಿಗೆ ಅನುದಾನ ಬಿಡುಗಡೆಗೊಳಿಸಿ: ಜಿ.ಆರ್. ಶಿವಶಂಕರ್‌ ಆಗ್ರಹ

ಅಂಗನವಾಡಿ ಸಂಘಟನೆಗಳ ಜಂಟಿ ಸಮಾವೇಶದಲ್ಲಿ ಟಿಯುಸಿಸಿ ಅಧ್ಯಕ್ಷ ಶಿವಶಂಕರ್‌ ಆಗ್ರಹ
Published 3 ಆಗಸ್ಟ್ 2024, 15:39 IST
Last Updated 3 ಆಗಸ್ಟ್ 2024, 15:39 IST
ಅಕ್ಷರ ಗಾತ್ರ

ಬೆಂಗಳೂರು: ‘ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ–ಯುಕೆಜಿ ತರಗತಿಗಳನ್ನು ನಡೆಸಲು ಅಗತ್ಯವಾದ ಅನುದಾನ ಬಿಡುಗಡೆಗೊಳಿಸಬೇಕು’ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿಯ (ಟಿಯುಸಿಸಿ) ಅಧ್ಯಕ್ಷ ಜಿ.ಆರ್. ಶಿವಶಂಕರ್‌ ಸರ್ಕಾರವನ್ನು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ಶನಿವಾರ ಆಯೋಜಿಸಿದ್ದ ‘ಅಂಗನವಾಡಿ ಸಂಘಟನೆಗಳ ಜಂಟಿ ಸಮಾವೇಶ’ದಲ್ಲಿ ಅವರು ಮಾತನಾಡಿದರು.

‘ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ–ಯುಕೆಜಿ ಪ್ರಾರಂಭಿಸಲು ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ಈ ವ್ಯವಸ್ಥೆಯನ್ನು ಬಲಪಡಿಸಲು ಶಿಕ್ಷಣ ತಜ್ಞರು, ವಿಷಯ ಪರಿಣಿತರು ಹಾಗೂ ಅಂಗನವಾಡಿ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕು. ಇಲ್ಲಿ ಕಲಿಯುತ್ತಿರುವ ಎಲ್ಲ ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕಗಳನ್ನು ಒದಗಿಸಬೇಕು’ ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಬಿ. ಪ್ರೇಮಾ, ‘ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ 2023ರ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಗ್ರಾಚ್ಯುಟಿ ನೀಡುವ ಸರ್ಕಾರದ ಆದೇಶವನ್ನು ಹಿಂಪಡೆದು, ಎಲ್ಲ ನಿವೃತ್ತರಿಗೂ ಗ್ರಾಚ್ಯುಟಿ ನೀಡಬೇಕು. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಆಗುತ್ತಿರುವ ಪೌಷ್ಟಿಕ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದ್ದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪ್ರಕಾರ ಸ್ಥಳೀಯ ಪೌಷ್ಟಿಕ ಆಹಾರ ನೀಡಬೇಕೆಂಬ ನಿಯಮವಿದ್ದು, ಅದನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗುತ್ತಿದೆ’ ಎಂದು ದೂರಿದರು.

‘ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವ ಧನ ಹೆಚ್ಚಿಸುವುದಾಗಿ ನೀಡಿದ್ದ ಭರವಸೆಯನ್ನು ಈಡೇರಿಸಬೇಕು. ನಿವೃತ್ತರಾದ ಎಲ್ಲರಿಗೂ ₹3 ಲಕ್ಷ ಇಡುಗಂಟು ನೀಡಬೇಕು’ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರ ಫೆಡರೇಷನ್‌ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಆಗ್ರಹಿಸಿದರು.

ಉಮಾಮಣಿ, ಎಐಯುಟಿಯುಸಿ ಸಂಘದ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ, ಎಂ.ಉಮಾದೇವಿ, ಜಿ.ಚಿತ್ರಾದೇವಿ, ಕೆ.ಸಿ. ಸಂತೋಷ, ಸಿ. ಶಿವಣ್ಣ, ನಾಗಮಣಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT