ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಮ್‌ಡಿಸಿವಿರ್ ಕಾಳಸಂತೆ: ಆರೋಪಿಗೆ ಜಾಮೀನು ನಿರಕಾರಣೆ

Last Updated 18 ಮೇ 2021, 18:40 IST
ಅಕ್ಷರ ಗಾತ್ರ

ಬೆಂಗಳೂರು: ರೆಮ್‌ಡಿಸಿವಿರ್ ಚುಚ್ಚುಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪಿಗೆ ಜಾಮೀನು ನೀಡಲು ನಿರಾಕರಿಸಿರುವ ಹೈಕೋರ್ಟ್, ಜೀವ ಉಳಿಸುವ ಔಷಧಗಳನ್ನು ಕಾಳಸಂತೆಯಲ್ಲಿ ಮಾರಾಟ ಆಗುವುದನ್ನು ತಡೆಗಟ್ಟಬೇಕು ಎಂದು ತಿಳಿಸಿದೆ.

ರೆಮ್‌ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪದಲ್ಲಿ ಬಂಧನದಲ್ಲಿರುವ ಸೊಹೈಲ್ ಪಾಷಾ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಜಾಮೀನು ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ಅವರಿದ್ದ ಪೀಠ, ‘ಕೋವಿಡ್ ಸಮಯದಲ್ಲಿ ಜೀವ ಉಳಿಸಿಕೊಳ್ಳಲು ಜನ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಲಾಭ ಗಳಿಸುವ ಉದ್ದೇಶದಿಂದ ರೆಮ್‌ಡಿಸಿವರ್ ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪ ಅರ್ಜಿದಾರರ ವಿರುದ್ಧ ಇದೆ. ಕೋವಿಡ್ ರೋಗಿಗಳ ಜೀವದ ಜೊತೆ ಚೆಲ್ಲಾಟ ಆಡುವುದು ಆಘಾತಕಾರಿ ಸಂಗತಿ’ ಎಂದುಹೇಳಿದೆ.

‘ಇವರಿಗೆ ಚುಚ್ಚುಮದ್ದು ಸಿಕ್ಕಿದ್ದು ಎಲ್ಲಿ ಎಂಬುದರ ಕುರಿತು ತನಿಖೆ ನಡೆಸಬೇಕು. ಈ ವಿಷಯದಲ್ಲಿ ಅಧಿಕಾರಿಗಳು ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಇನ್ನೂ ಹೆಚ್ಚಿನ ತನಿಖೆಯ ನಡೆಯಬೇಕಿದೆ. ಈ ರೀತಿಯ ದಂಧೆಯನ್ನು ನಿರ್ಮೂಲನೆ ಮಾಡಬೇಕಾದ ಅಗತ್ಯವಿದೆ’ ಎಂದು ಪೀಠ ತಿಳಿಸಿದೆ.

ತನಿಖೆಯ ಅಂತಿಮ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ತಲಾ ₹7 ಸಾವಿರಕ್ಕೆ 5 ಚುಚ್ಚುಮದ್ದನ್ನು ಮಾರಾಟ ಮಾಡಿದ ಆರೋಪದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಏ.17ರಿಂದ ಸೊಹೈಲ್ ಪಾಷಾ ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT