ಬೆಂಗಳೂರು: ‘ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಎರಡು ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ’ ಎಂದು ಮೂಲಗಳು ತಿಳಿಸಿವೆ.
ಜೂನ್ 9ರಂದು ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಸ್ವಾಮಿ ಅವರ ಕೊಲೆ ನಡೆದಿತ್ತು. ಸೆಪ್ಟೆಂಬರ್ 9ಕ್ಕೆ ಕೃತ್ಯ ನಡೆದು ಮೂರು ತಿಂಗಳು ಪೂರ್ಣಗೊಳ್ಳಲಿದ್ದು, ಅದರ ಒಳಗಾಗಿ ದೋಷಾರೋಪ ಪಟ್ಟಿ ಸಲ್ಲಿಸಬೇಕಿದೆ. ತನಿಖಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ಕೊಲೆ ಆರೋಪದಡಿ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾಗೌಡ ಸೇರಿ 17 ಮಂದಿಯನ್ನು ಬಂಧಿಸಲಾಗಿತ್ತು. ತನಿಖೆ ಹಂತದಲ್ಲಿ ಲಭಿಸಿದ ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದ ತನಿಖಾಧಿಕಾರಿಗಳು ಹೈದರಾಬಾದ್ ಹಾಗೂ ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಗಳಿಗೆ(ಎಫ್‌ಎಸ್‌ಎಲ್) ರವಾನಿಸಿದ್ದರು. ಎಲ್ಲ ವರದಿಗಳೂ ಪೊಲೀಸರ ಕೈಸೇರಿದ್ದು, 4,500ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿ ಸಿದ್ಧ ಮಾಡಿಕೊಂಡಿದ್ದಾರೆ. 240ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
‘ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರು ಇದುವರೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿಲ್ಲ. ದೋಷಾರೋಪ ಪಟ್ಟಿ ಸಲ್ಲಿಕೆಯಾದ ನಂತರ ಅರ್ಜಿ ಸಲ್ಲಿಸಲಾಗುವುದು. ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನು 57ನೇ ನಗರ ಸಿವಿಲ್ ನ್ಯಾಯಾಲಯವು ವಜಾಗೊಳಿಸಿದೆ’ ಎಂದು ಮೂಲಗಳು ಹೇಳಿವೆ.
ಚಂದ್ರಗುಪ್ತ ನೇಮಕ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ದರ್ಶನ್ ಅವರಿಗೆ ವಿಶೇಷ ಆತಿಥ್ಯ ನೀಡಿದ್ದ ಪ್ರಕರಣದ ತನಿಖೆ ನಡೆಸಿ ವರದಿ ನೀಡಲು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಚಂದ್ರಗುಪ್ತ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ವಿಶೇಷ ಆತಿಥ್ಯ ನೀಡಿದ್ದ ಆರೋಪದ ಅಡಿ ಒಂಬತ್ತು ಮಂದಿ ಜೈಲು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು.
ಕಾರಾಗೃಹದಲ್ಲಿ ದರ್ಶನ್ ವಿಡಿಯೊ ಕರೆ ಮಾಡಿ ಮಾತನಾಡಿರುವುದು, ಸಿಗರೇಟು ಸೇದುತ್ತಾ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನನ ಜತೆಗೆ ಹರಟೆ ಹೊಡೆಯುತ್ತಿದ್ದ ಪ್ರಕರಣದ ತನಿಖೆಯನ್ನು ಚಂದ್ರಗುಪ್ತ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.