ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಗರದ 57ನೇ ಸಿಟಿ ಸಿವಿಲ್ ನ್ಯಾಯಾಲಯ ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ.
ಕೊಲೆ ಪ್ರಕರಣ ಸಂಬಂಧ ಶುಕ್ರವಾರ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು ಆರೋಪಿಗಳಿಗೆ ಜಾಮೀನು ನೀಡದಂತೆ ತಕರಾರು ಅರ್ಜಿ ಸಲ್ಲಿಸಿದರು.
ವಾದ ಆರಂಭಿಸಿದ ದರ್ಶನ್ ಪರ ವಕೀಲ ಸುನೀಲ್, ‘ಜಾಮೀನು ಅರ್ಜಿಯ ವಿಚಾರಣೆ ಸಂಬಂಧ ಎಸ್ಪಿಪಿ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ವಕೀಲರು ನಗರದಲ್ಲಿ ಇಲ್ಲದ ಕಾರಣ ವಾದ ಮಂಡಿಸಲು ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದರು.
ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಪರ ವಾದ ಮಂಡಿಸಿದ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್, ‘ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನನ್ನ ಕಕ್ಷಿದಾರರ ಪಾತ್ರವಿಲ್ಲ. ತಮ್ಮ ಮನೆಯ ಕೆಲಸಗಾರ ಪವನ್ ಹಾಗೂ ದರ್ಶನ್‌ಗೆ ವಿಷಯ ತಿಳಿಸಿದ್ದರು. ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ಇನ್ನಿತರ ಆರೋಪಿಗಳು ನಗರಕ್ಕೆ ಕರೆತಂದಿದ್ದರು. ಪವಿತ್ರಾ ಶೆಡ್ಗೆ ಹೋಗಿರುವ ಬಗ್ಗೆ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆಯೇ ಹೊರತು, ಕೊಲೆ ಮಾಡಿದ್ದಾರೆ ಎಂದು ಹೇಳಿಲ್ಲ. ಆರೋಪ ಪಟ್ಟಿಯಲ್ಲೂ ಪೊಲೀಸರು ಉಲ್ಲೇಖಿಸಿಲ್ಲ’ ಎಂದು ಹೇಳಿದರು.
‘ಪಟ್ಟಣಗೆರೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಪ್ರತ್ಯಕ್ಷ ಸಾಕ್ಷಿ ಕಿರಣ್ ಅವರು, ಪವಿತ್ರಾ ಗೌಡ ಅವರು ರೇಣುಕಸ್ವಾಮಿಗೆ ಚಪ್ಪಲಿಯಿಂದ ಕಪಾಳಕ್ಕೆ ಹೊಡೆದರು ಎಂದು ಹೇಳಿಕೆ ನೀಡಿದ್ದಾರೆ. ಹೊಡೆದ ಮಾತ್ರಕ್ಕೆ ಕೊಲೆ ಮಾಡಿದಂತೆಯಾ?’ ನನ್ನ ಕಕ್ಷಿದಾರರರಿಗೆ ಜಾಮೀನು ನೀಡಬೇಕು’ ಎಂದು ಮನವಿ ಮಾಡಿದರು.
ಇದೇ ವೇಳೆ ಪ್ರಕರಣದ 8ನೇ ಆರೋಪಿ ರವಿಶಂಕರ್ ಜಾಮೀನು ಅರ್ಜಿ ಸಂಬಂಧ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದರು. ಸೋಮವಾರ ಪ್ರತಿವಾದ ಮಾಡುವುದಾಗಿ ಪ್ರಸನ್ನಕುಮಾರ್ ತಿಳಿಸಿದರು.
ದರ್ಶನ್ ಸೇರಿ ಮೂವರ ಅರ್ಜಿ ವಿಚಾರಣೆ ಸೆ. 30ಕ್ಕೆ ಮುಂದೂಡಿದರೆ, ಇದೇ ಪ್ರಕರಣದಲ್ಲಿ ಇನ್ನಿತರ ಐವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಅ.5ಕ್ಕೆ ಮುಂದೂಡಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ 17 ಜನರ ಪೈಕಿ 15, 16 ಮತ್ತು 17ನೇ ಆರೋಪಿಗೆ ಜಾಮೀನು ಸಿಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.