ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿ 17 ಮಂದಿಯ ನ್ಯಾಯಾಂಗ ಬಂಧನದ ಅವಧಿಯನ್ನು ಒಂದು ದಿನದ ಮಟ್ಟಿಗೆ (ಸೆಪ್ಟೆಂಬರ್ 13) ವಿಸ್ತರಿಸಿದ 24ನೇ ಎಸಿಎಂಎಂ ನ್ಯಾಯಾಲಯವು, ಪ್ರಕರಣದ ವಿಚಾರಣೆಯನ್ನು ಮುಂದೂಡಿತು.
ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಗುರುವಾರಕ್ಕೆ ಮುಕ್ತಾಯವಾಗಿತ್ತು. ಈ ಪ್ರಕರಣದಲ್ಲಿ ಬಂಧಿತರಾಗಿ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ಎಲ್ಲ ಆರೋಪಿಗಳನ್ನೂ ವಿಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ಮಧ್ಯಾಹ್ನ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.
ಇದೇ ವೇಳೆ ಕೊಲೆ ಪ್ರಕರಣ ವಿಚಾರಣೆಯನ್ನು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವುದಾಗಿ ನ್ಯಾಯಾಧೀಶರು ಹೇಳಿದರು. ತನಿಖಾಧಿಕಾರಿಗಳು ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಲ್ಲಿಸಿದ ಬಳಿಕ ಸೆಷನ್ಸ್ ಕೋರ್ಟ್‌ಗೆ ಪ್ರಕರಣ ವರ್ಗಾವಣೆ ಮಾಡುವಂತೆ ಆರೋಪಿಗಳ ಪರ ವಕೀಲರು ಮನವಿ ಮಾಡಿದರು.
ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡುವಂತೆ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ಅವರು ಮನವಿ ಮಾಡಿದರು.