ಶುಕ್ರವಾರ, ಸೆಪ್ಟೆಂಬರ್ 17, 2021
31 °C
ಮುಖ್ಯಮಂತ್ರಿಗೆ ಪತ್ರ ಬರೆದ ವೈದ್ಯರು

ಭರವಸೆ ಈಡೇರಿಸುವಲ್ಲಿ ಸರ್ಕಾರ ವಿಫಲ: 8ಕ್ಕೆ ಗುತ್ತಿಗೆ ವೈದ್ಯರ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹುದ್ದೆ ಕಾಯಂ ಗೊಳಿಸುವಿಕೆ ಸೇರಿದಂತೆ ವಿವಿಧ ಭರವಸೆಗಳನ್ನು ಸರ್ಕಾರ ಈಡೇರಿಸದ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ 507 ವೈದ್ಯರು ಜುಲೈ 8ಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವೈದ್ಯರು ಪತ್ರ ಬರೆದಿದ್ದಾರೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ವೈದ್ಯರು ಕಳೆದ ಜೂನ್ 17ರಂದು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದರು. ಈ ವೇಳೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಅದರ ಪ್ರಕ್ರಿಯೆ ನಡೆಯದ ಹಿನ್ನೆಲೆಯಲ್ಲಿ ಮತ್ತೆ ರಾಜೀನಾಮೆ ನಿರ್ಧಾರವನ್ನು ವೈದ್ಯರು ಕೈಗೊಂಡಿದ್ದಾರೆ. ಜುಲೈ 8ರಿಂದ ಸೇವೆಗೆ ಹಾಜರಾಗುವುದಿಲ್ಲ ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. 

‘ಕೋವಿಡ್‌ ವಿರುದ್ಧ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದೇವೆ. ಆರೋಗ್ಯ ಇಲಾಖೆ ಸಂಕಷ್ಟಕ್ಕೆ ಸಿಲುಕಿದ ಸಮಯಗಳಲ್ಲಿ ಕೂಡ ಸೇವೆ ಸಲ್ಲಿಸಿದ್ದೇವೆ. ಈಗಾಗಲೇ ಬಹಳಷ್ಟು ವೈದ್ಯರು ಕೋವಿಡ್ ಪೀಡಿತರಾಗಿದ್ದಾರೆ. ಕಾಯಂ ವೈದ್ಯರಷ್ಟೇ ಜವಾಬ್ದಾರಿಯಿಂದ
ಕಾರ್ಯನಿರ್ವಹಿಸಿದರೂ ವೇತನದಲ್ಲಿ ತಾರತಮ್ಯ ಮಾಡಲಾಗಿದೆ. ನಮಗೆ ಸೇವಾ ಭದ್ರತೆ ಕೂಡ ಇಲ್ಲ. ಹಿಂದಿನಿಂದಲೂ ಮೂರು ವರ್ಷ ಗುತ್ತಿಗೆ ಆಧಾರದಲ್ಲಿ ಗ್ರಾಮೀಣ ಸೇವೆ ಪೂರೈಸಿದವರನ್ನು ಕಾಯಂಗೊಳಿ ಸಲಾಗಿದೆ. ಗ್ರಾಮೀಣ ಜನರ ಸೇವೆ ಮಾಡುತ್ತಿರುವ ನಮ್ಮನ್ನು ಕಡೆಗಣಿಸಲಾಗಿದೆ’ ಎಂದು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. 

‘ನಮ್ಮನ್ನು ಕಾಯಂಗೊಳಿಸುವಂತೆ ಮುಖ್ಯಮಂತ್ರಿ, ಆರೋಗ್ಯ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಆಯುಕ್ತರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಸರ್ಕಾರಕ್ಕೆ ನಮ್ಮ ಅವಶ್ಯಕತೆ ಇಲ್ಲ ಅನಿಸುತ್ತದೆ. ಹಾಗಾಗಿ ರಾಜೀನಾಮೆ ನಿರ್ಧಾರವನ್ನು ಕೈಗೊಂಡಿದ್ದೇವೆ. ಇಷ್ಟು ದಿನ ಸೇವೆ ಸಲ್ಲಿಸಲು ಅವಕಾಶ ನೀಡಿರುವುದಕ್ಕೆ ಸರ್ಕಾರಕ್ಕೆ ಧನ್ಯವಾದಗಳು. ನಮ್ಮ ಈ ನಿರ್ಧಾರದಿಂದ ಗ್ರಾಮೀಣ ಭಾಗದ ಜನರಿಗೆ ಸಮಸ್ಯೆಯಾಗುತ್ತದೆ ಎನ್ನುವುದರ ಅರಿವಿದೆ. ಹಲವು ದಿನಗಳು ಕಾದು ಈ ನಿರ್ಧಾರಕ್ಕೆ ಬಂದಿದ್ದೇವೆ’ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ವೈದ್ಯಾಧಿಕಾರಿಗಳ ಸಂಘ ತಿಳಿಸಿದೆ.  

₹ 60 ಸಾವಿರಕ್ಕೆ ವೇತನ ಹೆಚ್ಚಳ
ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವೇತನವನ್ನು ₹ 45 ಸಾವಿರದಿಂದ ₹ 60 ಸಾವಿರಕ್ಕೆ ಏರಿಕೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 

‘ಕೋವಿಡ್ ಪರಿಸ್ಥಿತಿಯಲ್ಲಿ ವೇತನ ಹೆಚ್ಚಿಸಿರುವುದು ಒಳ್ಳೆಯ ವಿಚಾರ. ಕಾಯಂ ವೈದ್ಯರಿಗೆ ನೀಡಿದ ಸೇವಾ ಭದ್ರತೆಯನ್ನು ನೀಡಬೇಕೆನ್ನುವುದು ನಮ್ಮ ಪ್ರಮುಖ ಬೇಡಿಕೆ. ಹಾಗಾಗಿ ನಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಸಾಧ್ಯವಿಲ್ಲ’ ಎಂದು ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ವಿನಯ್ ಮಂಜುನಾಥ್ ಅವರು ತಿಳಿಸಿದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು