ಸೋಮವಾರ, ಜೂನ್ 27, 2022
21 °C

ತಳಮಟ್ಟದಲ್ಲೇ ನಿಗಾ ವಹಿಸಿದರೆ ಸಾಂಕ್ರಾಮಿಕ ರೋಗಕ್ಕೆ ತಡೆ: ಡಾ.ಸೌಮ್ಯಾ ಸ್ವಾಮಿನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಜಿಲ್ಲಾ ಮಟ್ಟದಲ್ಲಿಯೇ ಸಾಂಕ್ರಾಮಿಕ ರೋಗಗಳ ಸಮರ್ಪಕ ನಿರ್ವಹಣೆ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ರೂಪಿಸಿಕೊಂಡರೆ ಭವಿಷ್ಯದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಬಹುದು’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯಾ ಸ್ವಾಮಿನಾಥನ್ ಹೇಳಿದರು. 

ನಗರದಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ’ಸಾಂಕ್ರಾಮಿಕ, ಸಿದ್ಧತೆ’ ಕುರಿತು ಹಮ್ಮಿಕೊಂಡಿದ್ದ ಜೀವರಕ್ಷಾ ಸಮಾವೇಶದಲ್ಲಿ ಅವರು ಮಾತನಾಡಿದರು.

’ಮನುಷ್ಯ ಮತ್ತು ಪ್ರಾಣಿಗಳಲ್ಲಿ ಸೋಂಕು ಕಾಣಿಸಿಕೊಳ್ಳುವುದರ ಬಗ್ಗೆ ಹೆಚ್ಚು ಜ್ಞಾನ ಹೊಂದಿರುವ ಸಾರ್ವಜನಿಕ ಆರೋಗ್ಯ ತಜ್ಞರನ್ನು ಪ್ರತಿ ಜಿಲ್ಲೆಯಲ್ಲಿ ನೇಮಕ ಮಾಡಬೇಕು. ಯಾವುದೇ ಸಾಂಕ್ರಾಮಿಕ ರೋಗದ ಕುರಿತು ನಿಖರ ಪರಿಶೀಲನೆ ಮತ್ತು ವಿವರ ದಾಖಲಿಸುವ ಪ್ರಕ್ರಿಯೆ ಸಮರ್ಪಕವಾಗಿ ನಡೆದರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು’ ಎಂದು ಅವರು ಅಭಿಪ್ರಾಯಪಟ್ಟರು.

ಸಮಾವೇಶ ಉದ್ಘಾಟಿಸಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ‘ಜೀವರಕ್ಷಾ ಅಡಿ ತರಬೇತಿ ಪಡೆದ ವೈದ್ಯರು ಮತ್ತು ಶುಶ್ರೂಷಕರು ಕೋವಿಡ್‌ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ನೂರಾರು ಜೀವಗಳನ್ನು ಉಳಿಸಿದ್ದಾರೆ’ ಎಂದು ಶ್ಲಾಘಿಸಿದರು.

’ಜೀವರಕ್ಷಾ ಕೋರ್ಸ್‌ ಅಡಿ ತ್ವರಿತವಾಗಿ ವೈದ್ಯರು ಹಾಗೂ ಶುಶ್ರೂಷಕರಿಗೆ ತರಬೇತಿ ನೀಡುವ ಕಾರ್ಯವನ್ನು ವಿಶ್ವವಿದ್ಯಾಲಯ ಮಾಡಿದೆ’ ಎಂದೂ ಹೊಗಳಿದರು.

ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸಚ್ಚಿದಾನಂದ, ‘ಕ್ರ್ಯಾಶ್‌ ಕೋರ್ಸ್‌ ಅಡಿ ವೈದ್ಯಕೀಯ ಸಿಬ್ಬಂದಿಗೆ ತರಬೇತಿ ನೀಡುವ ಜೀವರಕ್ಷಾ ಯೋಜನೆಯು ಅತ್ಯಂತ ಯಶಸ್ವಿಯಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು