ಬೆಂಗಳೂರು: ರಾಜರಾಜೇಶ್ವರಿನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಬೀದಿನಾಯಿಗಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ನಾಯಿಗಳ ಸಾವಿನ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಮೂರು ನಾಯಿಗಳ ಮೃತದೇಹಗಳು ಪತ್ತೆಯಾಗಿವೆ. ಅವುಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬರಬೇಕಿದೆ’ ಎಂದು ತಿಳಿಸಿದರು.
‘ರಾಜರಾಜೇಶ್ವರಿನಗರ, ಹೊಸಕೆರೆಹಳ್ಳಿ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ವಿಷವುಣಿಸಿ ಬೀದಿನಾಯಿಗಳನ್ನು ಕೊಲ್ಲಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ 18 ನಾಯಿಗಳು ಮೃತಪಟ್ಟಿವೆ ಎಂಬುದಾಗಿ ದೂರುದಾರರು ಹೇಳುತ್ತಿದ್ದಾರೆ. ಆದರೆ, ಸದ್ಯ ಮೂರು ನಾಯಿಗಳ ಮೃತದೇಹಗಳು ಮಾತ್ರ ಸಿಕ್ಕಿವೆ’ ಎಂದು ಹೇಳಿದರು.
‘ನಾಯಿಯ ಕುತ್ತಿಗೆಗೆ ಹಗ್ಗ ಬಿಗಿದು ಕೊಂದಿರುವ ದುಷ್ಕರ್ಮಿಗಳು, ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದು ಹೋಗಿದ್ದಾರೆ. ದುಷ್ಕರ್ಮಿಗಳು ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.