ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌.ಆರ್‌.ನಗರ ಉಪಚುನಾವಣೆ: ಆನ್‌ಲೈನ್‌ನಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ

ರಾಜಕೀಯ ಪಕ್ಷಗಳ ಮುಖಂಡರ ಜೊತೆ ಜಿಲ್ಲಾ ಚುನಾವಣಾಧಿಕಾರಿ ಸಭೆ
Last Updated 30 ಸೆಪ್ಟೆಂಬರ್ 2020, 14:42 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ನಾಮಪತ್ರ, ಪ್ರಮಾಣಪತ್ರಗಳನ್ನು ಆನ್‌ಲೈನ್ ಮೂಲಕ ಸಲ್ಲಿಸುವುದಕ್ಕೆ ಹಾಗೂ ಠೇವಣಿ ಮೊತ್ತದ ಡಿಜಿಟಲ್‌ ಪಾವತಿಗೆ ಅವಕಾಶ ಕಲ್ಪಿಸಲಾಗುತ್ತದೆ’ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎನ್‌.ಮಂಜುನಾಥ ಪ್ರಸಾದ್ ತಿಳಿಸಿದರು.

ಉಪಚುನಾವಣೆಗೆ ಸಂಬಂಧ ಜಿಲ್ಲಾ ಚುಣಾವಣಾಧಿಕಾರಿ ಎನ್‌.ಮಂಜುನಾಥ ಪ್ರಸಾದ್‌ ಅವರು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಬುಧವಾರ ಸಭೆ ನಡೆಸಿದರು. ‘ಆನ್‌ಲೈನ್ ಮೂಲಕ ನಾಮಪತ್ರ ಸಲ್ಲಿಸಿರುವವರು ನಾಮಪತ್ರ, ಪ್ರಮಾಣಪತ್ರ ಹಾಗೂ ಠೇವಣಿ ಪಾವತಿಸಿದ ದಾಖಲೆಗಳ ಪ್ರತಿಯನ್ನು ನಂತರ ಚುನಾವಣಾಧಿಕಾರಿಗೆ ತಲುಪಿಸಬೇಕು’ ಎಂದು ಅವರು ಹೇಳಿದರು.

‘ಆರ್‌.ಆರ್‌.ನಗರ ವಲಯದ ಜಂಟಿ ಆಯುಕ್ತರ ಕಚೇರಿಯಲ್ಲಿ ಅ.9 ರಿಂದ 16ರವರೆಗೆ ನಾಮಪತ್ರ ಸ್ವೀಕರಿಸಲಿದ್ದೇವೆ. ನಾಮಪತ್ರ ಸಲ್ಲಿಕೆ ವೇಳೆ ಕಚೇರಿಯ 100 ಮೀ.ವ್ಯಾಪ್ತಿಯಲ್ಲಿ ಅಭ್ಯರ್ಥಿಗೆ ಸಂಬಂಧಿಸಿದ ಎರಡು ವಾಹನಗಳಿಗೆ ಮಾತ್ರ ಪ್ರವೇಶಾವಕಾಶ ಅವಕಾಶ ನೀಡಲಾಗುತ್ತದೆ. ಈ ಬಗ್ಗೆ ಕಣ್ಗಾವಲು ಇಡಲು ಕಚೇರಿಯ ಬಳಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ’ ಎಂದು ವಿವರಿಸಿದರು.

ಸಾರ್ವಜನಿಕ ಸಭೆ, ಪ್ರಚಾರ ಕಾರ್ಯಗಳಿಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಮನೆ-ಮನೆಗೆ ಹೋಗಿ ಚುನಾವಣಾ ಪ್ರಚಾರ ನಡೆಸುವಾಗ ಐದಕ್ಕಿಂತ ಹೆಚ್ಚು ಮಂದಿ ಕಾರ್ಯಕರ್ತರು ಒಟ್ಟಿಗೆ ಇರುವಂತಿಲ್ಲ. ರೋಡ್ ಶೋನಲ್ಲಿ 5 ವಾಹನಗಳಿಗೆ ಮಾತ್ರ ಅವಕಾಶವಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.

‘ವಿವಿ.ಪ್ಯಾಟ್‌ ಹಾಗೂ ವಿದ್ಯುನ್ಮಾನ ಮತಯಂತ್ರಗಳು ಸಿದ್ಧ ಇವೆ. ಅವುಗಳನ್ನು ಮೂರು ಹಂತಗಳಲ್ಲಿ ಪರಿಶೀಲನೆ ನಡೆಸಲಾಗುವುದು. ಅಭ್ಯರ್ಥಿಗಳ ಪ್ರತಿನಿಧಿಗಳೂ ಅವುಗಳನ್ನು ನೋಡಬಹುದು. ಕೋವಿಡ್ ವ್ಯಾಪಕವಾಗಿರುವುದರಿಂದ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಚುನಾವಣೆ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಆಯೋಗವು ವೀಕ್ಷಕರನ್ನು ಶೀಘ್ರವೇ ಕಳುಹಿಸಲಿದೆ’ ಎಂದು ತಿಳಿಸಿದರು.

ವಿಶೇಷ ಆಯುಕ್ತರು(ಆಡಳಿತ) ಜೆ.ಮಂಜುನಾಥ್ ಉಪಸ್ಥಿತರಿದ್ದರು.

‘ಮತದಾರರ ಚೀಟಿ ಸಂಗ್ರಹಿಸಿಟ್ಟುಕೊಂಡರೆ ಕೇಸ್‌’

‘ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದಕ್ಕೆ ಅಥವಾ ಬೇರೆಯವರಿಗೆ ಕೊಡುವುದಕ್ಕೆ ಅವಕಾಶ ಇಲ್ಲ. ಈ ಬಗ್ಗೆ ಆಟೊಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲಿದ್ದೇವೆ. ಇಷ್ಟಾಗಿಯೂ ಮತದಾರರ ಗುರುತಿನ ಚೀಟಿ ಸಂಗ್ರಹಿಸಿಟ್ಟುಕೊಳ್ಳುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೂ ಆಸ್ಪದ ನೀಡಬಾರದು’ ಎಂದು ಜಿಲ್ಲ ಚುನಾವಣಾಧಿಕಾರಿ ಎಚ್ಚರಿಸಿದರು.

2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಫ್ಲ್ಯಾಟ್‌ ಒಂದರಲ್ಲಿ ಭಾರಿ ಪ್ರಮಾಣದಲ್ಲಿ ಮತದಾರರ ಗುರುತಿನ ಚೀಟಿ ಸಂಗ್ರಹಿಸಿಟ್ಟುಕೊಂಡಿದ್ದು ಪತ್ತೆಯಾಗಿತ್ತು. ಈ ಕಾರಣಕ್ಕೆ ಚುನಾವಣೆಯನ್ನು ಮುಂದೂಡಲಾಗಿತ್ತು.

‘ನೀತಿಸಂಹಿತೆ ಉಲ್ಲಂಘಿಸಿದರೆ ಕ್ರಿಮಿನಲ್‌ ಮೊಕದ್ದಮೆ’

‘ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತು ಆಧಾರಗಳ ಸಮೇತ ದೂರು ನೀಡಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿದ್ದೇವೆ’ ಎಂದು ಮಂಜುನಾಥ ಪ್ರಸಾದ್‌ ತಿಳಿಸಿದರು.

‘ಕೇಂದ್ರ ಚುನಾವಣಾ ಆಯೋಗ ಉಪ-ಚುನಾವಣೆಯನ್ನು ಘೋಷಣೆ ಮಾಡಿದ ಕ್ಷಣದಿಂದಲೇ ಈ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಆ ಕ್ಷೇತ್ರದಲ್ಲಿ ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಯಾವುದೇ ಇಲಾಖೆಗಳಿಂದ ಹೊಸ ಕಾಮಗಾರಿ ನಡೆಸುವಂತಿಲ್ಲ. ಈ ಬಗ್ಗೆ ಈಗಾಗಲೇ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜಕೀಯ ಮುಖಂಡರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿರುವ ಬಗ್ಗೆ ದಾಖಲೆ ಒದಗಿಸಿದರೆ ಅಂತಹ ಅಧಿಕಾರಿಯನ್ನು ಅಮಾನತು ಮಾಡಿ ಅವರ ಮೇಲೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT