‘ನಿಯಮ ಪ್ರಕ್ರಿಯೆ ಚಾಲ್ತಿಯಲ್ಲಿದೆ’

7
ಅಧ್ಯಕ್ಷ–ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ತಕರಾರು

‘ನಿಯಮ ಪ್ರಕ್ರಿಯೆ ಚಾಲ್ತಿಯಲ್ಲಿದೆ’

Published:
Updated:

ಬೆಂಗಳೂರು: ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಕಾಯ್ದೆ–1993ರ ಕಲಂ 49 (2) ಕ್ಕೆ ತಿದ್ದುಪಡಿ ತಂದ ನಂತರ ನಿಯಮಗಳನ್ನು ಇನ್ನೂ ತಂದಿಲ್ಲ. ಅವುಗಳನ್ನು ರೂಪಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆ ತಕರಾರಿಗೆ ಸಂಬಂಧಿಸಿದಂತೆ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ 60ಕ್ಕೂ ಹೆಚ್ಚು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ವಿಭಾಗೀಯ ನ್ಯಾಯಪೀಠ ಗುರುವಾರ ಮುಂದುವರಿಸಿತು.

ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್‌ ಜನರಲ್ ಎ.ಎಸ್‌.ಪೊನ್ನಣ್ಣ ಈ ಕುರಿತಂತೆ ನ್ಯಾಯಪೀಠದ ಪ್ರಶ್ನೆಗೆ ಉತ್ತರಿಸಿ, ‘ಮೂಲ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಸೂಕ್ತ ನಿಯಮಮಾವಳಿ ರೂಪಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮೇಲ್ಮನವಿದಾರರ ಪರ ವಕೀಲರು ವಾದ ಮಂಡಿಸಿ, ‘ಏಕಸದಸ್ಯ ನ್ಯಾಯಪೀಠದ ಆದೇಶವು ತಿದ್ದಪಡಿಯನ್ನು ತಪ್ಪಾಗಿ ಅರ್ಥೈಸಿದೆ. ಕೇವಲ ನಿರ್ದಿಷ್ಟ ಆರೋಪಗಳ ಮೇಲೆ ಅವಿಶ್ವಾಸ ಮಂಡನೆಗೆ ಅವಕಾಶ ನೀಡಬಾರದು. ಕೇಳಿಬಂದ ಆರೋಪಗಳ ಸತ್ಯಾಸತ್ಯತೆಯನ್ನು ತೀರ್ಮಾನಿಸಿದ ಮೇಲೆ ಮಂಡನೆ ಮಾಡಬಹುದು’ ಎಂದು ವಿವರಿಸಿದರು.

ವಾದ–ಪ್ರತಿವಾದ ಅಪೂರ್ಣವಾಗಿದ್ದು ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಲಾಗಿದೆ.

‘ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರ ವಿರುದ್ಧ ಆರೋಪ ಕೇಳಿ ಬಂದ ಕೂಡಲೇ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಉಪವಿಭಾಗಾಧಿಕಾರಿ ನೋಟಿಸ್ ಜಾರಿ ಮಾಡಿರುವುದು ಅಸಾಂವಿಧಾನಿಕ ಮತ್ತು ಈಗಾಗಲೇ ಮಂಡಿಸಿರುವ ಅವಿಶ್ವಾಸ ನಿರ್ಣಯ ರದ್ದುಪಡಿಸಬೇಕು’ ಎಂದು ಕೋರಿ ಸುಮಾರು 60ಕ್ಕೂ ಹೆಚ್ಚು ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿಗಳನ್ನು ಏಕಸದಸ್ಯ ನ್ಯಾಯಪೀಠ ವಜಾ ಮಾಡಿತ್ತು.

ಕೇವಲ ಆರೋಪಗಳ ಆಧಾರದಲ್ಲಿ ಅವಿಶ್ವಾಸ ನಿರ್ಣಯ ಕೈಗೊಂಡು ಅಧ್ಯಕ್ಷ–ಉಪಾಧ್ಯಕ್ಷರನ್ನು ಹುದ್ದೆಯಿಂದ ಕೆಳಗಿಳಿಸುವುದಕ್ಕೆ ಅವಕಾಶ ನೀಡುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ-1993 ಕಲಂ 49 (2) ಅನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಅರ್ಜಿದಾರರು ಕೋರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !