ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ನಗದೀಕರಣದ ವಿರುದ್ಧ ಆಂದೋಲನ: ಸಚಿನ್‌ ಪೈಲಟ್‌

Last Updated 2 ಸೆಪ್ಟೆಂಬರ್ 2021, 6:32 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆ (ಎನ್‌ಎಂಪಿ) ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶವನ್ನು ಲೂಟಿ ಹೊಡೆಯಲು ಮುಂದಾಗಿದೆ. ಯೋಜನೆಯನ್ನು ಘೋಷಿಸುವ ಮುನ್ನ ಜನಾಭಿಪ್ರಾಯ ಪಡೆದಿಲ್ಲ. ಚರ್ಚೆಯನ್ನೂ ನಡೆಸದೆ ಸರ್ವಾಧಿಕಾರಿ ಧೋರಣೆಯಿಂದ ವರ್ತಿಸಿದೆ’ ಎಂದು ಕಾಂಗ್ರೆಸ್‌ ಮುಖಂಡ ಸಚಿನ್‌ ಪೈಲಟ್‌ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಎನ್ಎಂಪಿ ವಿರುದ್ಧ ಪಕ್ಷದ ವತಿಯಿಂದ ದೇಶವ್ಯಾಪಿ ಆಂದೋಲನ ಹಮ್ಮಿಕೊಳ್ಳಲಾಗುವುದು’ ಎಂದರು.

‘ರೈಲು ನಿಲ್ದಾಣಗಳು, ರಸ್ತೆಗಳು, ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆ ಕೊಳವೆ ಮಾರ್ಗ, ವಿದ್ಯುತ್ ವಲಯದ ಯೋಜನೆಗಳನ್ನು ಖಾಸಗಿ ವಲಯದ ಕಂಪನಿಗಳಿಗೆ ಲೀಸ್ ಆಧಾರದಲ್ಲಿ ವರ್ಗಾಯಿಸಲು ಕೇಂದ್ರ ಮುಂದಾಗಿದೆ. ಕಾಂಗ್ರೆಸ್‌ ನೇತೃತ್ವದ ಸರ್ಕಾರ 70 ವರ್ಷಗಳಿಂದ ಸೃಷ್ಟಿಸಿದ್ದ ಸಂಪತ್ತನ್ನು, ಪ್ರಧಾನಿ ಮೋದಿ ಏಳು ವರ್ಷಗಳಲ್ಲೇ ಮಾರಾಟ ಮಾಡಲು ಹೊರಟಿದ್ದಾರೆ. ಇದೇನಾ ಆತ್ಮ ನಿರ್ಭರ್‌’ ಎಂದು ಪ್ರಶ್ನಿಸಿದರು.

‘ಕೇಂದ್ರ ಸರಿಯಾದ ನೀತಿಗಳನ್ನು ಜಾರಿಗೆ ತರುತ್ತಿಲ್ಲ. ಕೇಂದ್ರದ ಯೋಜನೆಗಳು ಜನಪರವಾಗಿಲ್ಲ. ರೈತ ವಿರೋಧಿ ಕಾನೂನುಗಳ ವಿರುದ್ಧ ಹೋರಾಟ ನಡೆಯುತ್ತಿದ್ದರೂ ಕೇಂದ್ರ ಗಮನಹರಿಸುತ್ತಿಲ್ಲ. ಕೋವಿಡ್‌ ಲಸಿಕೆ ವಿತರಣೆಯಲ್ಲೂ ಅವ್ಯವಹಾರ ನಡೆಯುತ್ತಿದೆ. ರಾಜ್ಯ ಹಾಗೂ ಕೇಂದ್ರದ ನಡುವೆ ಸಾಮರಸ್ಯವಿಲ್ಲ. ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವಲ್ಲಿ ಹಿಂದೆ ಬಿದ್ದಿದೆ. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಕಾರ್ಯ ಮಾಡಿಲ್ಲ. ಸರ್ಕಾರ ಎನ್ನುವುದು ಬಿಜೆಪಿಯ ಖಾಸಗಿ ಸ್ವತ್ತಲ್ಲ. ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕ ದಿನೇಶ್ ಗುಂಡೂರಾವ್ ಇದ್ದರು.

‘ವರಿಷ್ಠರು ತೀರ್ಮಾನಿಸುತ್ತಾರೆ’
ರಾಜಸ್ಥಾನದಲ್ಲಿ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿನ್ ಪೈಲಟ್, ‘ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಸೇರಿ ಈ ಬಗ್ಗೆ ಆದಷ್ಟು ಶೀಘ್ರ ತೀರ್ಮಾನ ಕೈಗೊಳ್ಳುತ್ತಾರೆ. ಪಕ್ಷದ ಮುಖಂಡನಾಗಿ ನಾನು ಮಧ್ಯಪ್ರವೇಶ ಮಾಡುವುದಿಲ್ಲ. ಆದಷ್ಟು ತ್ವರಿತವಾಗಿ ಎಲ್ಲವೂ ನಿರ್ಧಾರವಾಗಲಿದೆ ಎಲ್ಲರೂ ಒಟ್ಟಾಗಿಯೇ ಕೆಲಸ ಮಾಡುತ್ತಿದ್ದೇವೆ’ ಎಂದರು.

‘ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತಗಳಿಲ್ಲ. ನಾಯಕರು, ಕಾರ್ಯಕರ್ತರ ನಡುವೆ ಹೊಂದಾಣಿಕೆಯಿದೆ. ಬಿಜೆಪಿ ವಿರುದ್ಧ ನಮ್ಮ‌ ಹೋರಾಟ ಮುಂದುವರಿದಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT