ಮಂಗಳವಾರ, ಆಗಸ್ಟ್ 3, 2021
24 °C

ಮೂರು ಶಾಲೆಗಳ ದತ್ತು: ತಕ್ಷಣ ಕ್ರಮಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಶಾಸಕರು ಶಾಲೆಗಳನ್ನು ದತ್ತುಕೊಳ್ಳಲು ತ್ವರಿತಗತಿಯಲ್ಲಿ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.

ಒಂದು ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಸೇರಿದಂತೆ ಒಟ್ಟು ಮೂರು ಶಾಲೆಗಳನ್ನು ದತ್ತು ತೆಗೆದುಕೊಂಡಿರುವ ಬಗ್ಗೆ ತಮ್ಮ ವ್ಯಾಪ್ತಿಯ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಉಪ ನಿರ್ದೇಶಕರು ಹಾಗೂ ತಮ್ಮ ವ್ಯಾಪ್ತಿಯ ಶಾಸಕರಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ ಪಡೆದು, ಜಿಲ್ಲಾವಾರು ಮತ್ತು ವಿಧಾನಸಭಾ ಕ್ಷೇತ್ರವಾರು ಪಟ್ಟಿಯನ್ನು ಕ್ರೋಡೀಕರಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಅವರು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಮಾಗಡಿ ಕ್ಷೇತ್ರದ ಶಾಸಕ ಎ. ಮಂಜುನಾಥ್‌ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ಮೂರು ಸರ್ಕಾರಿ ಶಾಲೆಗಳನ್ನು ದತ್ತುಕೊಂಡಿರುವ ವಿವರ ನೀಡಿದ್ದಾರೆ ಎಂದೂ ಪತ್ರದಲ್ಲಿ ತಿಳಿಸಿರುವ ಅವರು, ಇದೇ ಆಗಸ್ಟ್‌ ತಿಂಗಳ ಎರಡನೇ ವಾರದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯ ವಿವಿಧ ಕಡೆ ಈ ಯೋಜನೆಯನ್ನು ಮುಖ್ಯಮಂತ್ರಿ ಉದ್ಘಾಟಿಸಲು ದಿನ ನಿಗದಿಪಡಿಸಲಾಗುವುದು. ಹೀಗಾಗಿ, ಎಲ್ಲ 224 ಕ್ಷೇತ್ರಗಳಲ್ಲಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಲು ಕ್ರಮ ತೆಗೆದುಕೊಳ್ಳಬೇಕು ಎಂದೂ ತಿಳಿಸಿದ್ದಾರೆ.

2020–21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಕುರಿತು ಜುಲೈ 3ರಂದೇ ಸರ್ಕಾರ ಆದೇಶ ಹೊರಡಿಸಿತ್ತು. ದತ್ತು ತೆಗೆದುಕೊಳ್ಳಲು ಅನುಕೂಲವಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 10 ಶಾಲೆಗಳನ್ನು ಗುರುತಿಸಿ, ಅಗತ್ಯವಿರುವ ಕಾಮಗಾರಿಗಳ ಪ್ರಸ್ತಾವನೆಯನ್ನು ಶಾಸಕರಿಗೆ ಸಲ್ಲಿಸಬೇಕು. ಶಾಸಕರು ಅನುಮೋದಿಸಿದ ಕಾಮಗಾರಿ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಕಾರ್ಯಾದೇಶ ಜಾರಿಯಾಗುವಂತೆ ನೋಡಿಕೊಳ್ಳಬೇಕು.

ಇಲಾಖೆಯ ಉಪ ನಿರ್ದೇಶಕರು ತಮ್ಮ ಜಿಲ್ಲೆಯ ಮಾಹಿತಿಯನ್ನು ಆಗಸ್ಟ್‌ ಅಂತ್ಯದೊಳಗೆ ಆಯುಕ್ತರಿಗೆ ಸಲ್ಲಿಸಬೇಕು. ಮೂರು ಶಾಲೆಗಳ ಪೈಕಿ ಒಂದು ಕರ್ನಾಟಕ ಪಬ್ಲಿಕ್‌ ಶಾಲೆ ಆಗಿರಬೇಕು. ಅಲ್ಲದೆ, ಆಗಸ್ಟ್ ಅಂತ್ಯದೊಳಗೆ ದತ್ತು ಪಡೆದ ಶಾಲೆಗಳ ಅಭಿವೃದ್ಧಿ ಕಾಮಗಾರಿ ಆರಂಭಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು