ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿಎಸ್‌ಪಿ–ಟಿಎಸ್‌ಪಿ ಹಣ ಬೇರೆ ಉದ್ದೇಶಕ್ಕೆ ಬೇಡ: ಆಂಜನೇಯ

Published 13 ಮಾರ್ಚ್ 2024, 16:03 IST
Last Updated 13 ಮಾರ್ಚ್ 2024, 16:03 IST
ಅಕ್ಷರ ಗಾತ್ರ

ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ಜಾರಿಗೆ ತರಲಾಯಿತು. ಈ ಯೋಜನೆಯ ಹಣ ಸಮುದಾಯಗಳ ಅಭಿವೃದ್ಧಿಗಲ್ಲದೇ, ಬೇರೆಯದಕ್ಕೆ ಬಳಕೆ ಮಾಡಬಾರದು’ ಎಂದು ಮಾಜಿ ಸಚಿವ ಎಚ್‌. ಆಂಜನೇಯ ಹೇಳಿದರು.

ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರ ಸಂಘವು ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಯೋಜನೆಯ ಹಣವನ್ನು ಯಾವುದೋ ರಸ್ತೆ ಅಭಿವೃದ್ಧಿಗೆ, ಚರಂಡಿ ನಿರ್ಮಾಣಕ್ಕೆ ಬಳಕೆ ಮಾಡಿದ್ದಾರೆ. ಸಮುದಾಯದ ಮನೆಗಳು ಇರುವಲ್ಲಿ ಬಳಕೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದಿನ ಸರ್ಕಾರ ಪ್ಯಾಕೇಜ್‌ ಟೆಂಡರ್‌ ಪದ್ಧತಿ ಜಾರಿಗೆ ತಂದು ಶ್ರೀಮಂತರನ್ನು ಇನ್ನಷ್ಟು ಶ್ರೀಮಂತಗೊಳಿಸಿತ್ತು. ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ₹ 50 ಲಕ್ಷವರೆಗಿನ ಗುತ್ತಿಗೆ ನೀಡುವ ಯೋಜನೆಯನ್ನು ಸಿದ್ದರಾಮಯ್ಯ ಅವರು ಹಿಂದಿನ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು. ಈ ಬಾರಿ ₹1 ಕೋಟಿವರೆಗೆ ಹೆಚ್ಚಳ ಮಾಡಿದ್ದಾರೆ. ₹2 ಕೋಟಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

‘ನಾವೆಲ್ಲ ಶೋಷಣೆಗೆ ಒಳಗಾದ ಸಮುದಾಯದವರು. ಈಗ ನಮ್ಮಲ್ಲೇ ಕೆಲವು ಶೋಷಕರು ಹುಟ್ಟಿಕೊಳ್ಳುತ್ತಿದ್ದಾರೆ. ಹೀಗಾಗಬಾರದು’ ಎಂದು ಎಚ್ಚರಿಸಿದರು.

ಸಂಘದ ರಾಜ್ಯಾಧ್ಯಕ್ಷ ಎನ್‌. ಮಹದೇವಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಯಕೊಂಡ ಶಾಸಕ ಕೆ.ಎಸ್‌. ಬಸವಂತಪ್ಪ, ವಿಧಾನ ಪರಿಷತ್‌ ಸದಸ್ಯ ನಸೀರ್‌ ಅಹ್ಮದ್‌, ಕೌಶಲ ಅಭಿವೃದ್ಧಿ ನಿಗಮ ಅಧ್ಯಕ್ಷೆ ಕಾಂತ ನಾಯಕ್, ಸಹ ಪ್ರಾಧ್ಯಾಪಕ ಪ್ರದೀಪ್‌ ರಾಮಾವತ್‌, ಸುಪ್ರೀಂಕೋರ್ಟ್‌ ನ್ಯಾಯವಾದಿ ಜೈನಾ ಕೊಥಾರಿ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT