ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಾಹ್ಮಣರಿಗೆ ನಿಗಮ ಬೇಕು, ಅಲೆಮಾರಿಗಳಿಗೆ ಬೇಡವೇ: ಬಿ.ಎಸ್. ಶಿವಣ್ಣ ಪ್ರಶ್ನೆ

ಅಲೆಮಾರಿ ಸಮುದಾಯಗಳ ಸವಾಲು–ಪರಿಹಾರ ಸಂವಾದದಲ್ಲಿ ಮುಖಂಡರ ಪ್ರಶ್ನೆ
Last Updated 20 ಡಿಸೆಂಬರ್ 2021, 19:45 IST
ಅಕ್ಷರ ಗಾತ್ರ

ಬೆಂಗಳೂರು: ‘ಬ್ರಾಹ್ಮಣ ಸಮುದಾಯದವರು ಬಡವರಲ್ಲವೇ? ಅವರ ಮಕ್ಕಳು ದೇವಸ್ಥಾನಗಳ ಮುಂದೆ, ರಸ್ತೆ– ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿದ್ದಾರಲ್ಲವೇ, ಅವರಿಗೆ ಅಭಿವೃದ್ಧಿ ನಿಗಮ ಬೇಕು; ಆದರೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿರುವ ಅಲೆಮಾರಿ ಸಮುದಾಯಗಳಿಗೆ ನಿಗಮ ಬೇಡ ಅಲ್ಲವೇ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಶಿವಣ್ಣ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.‌

ಎಸ್‌.ಸಿ–ಎಸ್‌.ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾಸಭಾವು ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ‘ಎಸ್‌.ಸಿ–ಎಸ್‌.ಟಿ ಅಲೆಮಾರಿ ಸಮುದಾಯಗಳ ಸವಾಲುಗಳು ಮತ್ತು ಪರಿಹಾರ’ ಕುರಿತ ಸಂವಾದವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರವು ಬ್ರಾಹ್ಮಣರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೂ ಸರ್ಕಾರ ಪ್ರತ್ಯೇಕ ನಿಗಮ ಸ್ಥಾಪಿಸದಿದ್ದರೆ ಕಾಂಗ್ರೆಸ್‌ನಿಂದ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ₹500 ಕೋಟಿ ಅನುದಾನ ನೀಡುವ ಭರವಸೆಯನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ್ದಾರೆ. ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ರೂಪಿಸುವುದು ಮತ್ತು ನಿಗಮ ಸ್ಥಾಪಿಸುವ ವಿಷಯಗಳನ್ನು ಪಕ್ಷದ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗುವುದು’ ಎಂದು ಭರವಸೆ ನೀಡಿದರು.

‘ಅಲೆಮಾರಿ ಸಮುದಾಯಗಳ ಪರ ಸಿದ್ದರಾಮಯ್ಯ ಅವರನ್ನೇ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷವು ಘೋಷಿಸಬೇಕು’ ಎಂದು ಒತ್ತಾಯಿಸಿದರು.

ಎಸ್‌.ಸಿ–ಎಸ್‌.ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್ ಕೊತ್ತಗೆರೆ, ‘ಅಲೆಮಾರಿ ಸಮುದಾಯದವರು ನಗರ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಘಟಕ ವೆಚ್ಚ ₹ 5.50 ಲಕ್ಷ ಮತ್ತು ಗ್ರಾಮೀಣ ಪ್ರದೇಶದಲ್ಲಿ ₹ 3.50 ಲಕ್ಷ ಇತ್ತು. ಸಮಾಜ ಕಲ್ಯಾಣ ಇಲಾಖೆ ತನ್ನ ಪಾಲಿನ ಮೊತ್ತವನ್ನು ಸ್ಥಗಿತಗೊಳಿಸಿರುವುದರಿಂದ ಘಟಕ ವೆಚ್ಚವನ್ನು ಕ್ರಮವಾಗಿ ₹3.50 ಲಕ್ಷ ಮತ್ತು ₹1.75 ಲಕ್ಷಕ್ಕೆ ಇಳಿಸಲಾಗಿದೆ. ಇದನ್ನು ಹೆಚ್ಚಳ ಮಾಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT