ಭಾನುವಾರ, ಸೆಪ್ಟೆಂಬರ್ 26, 2021
25 °C
ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನಗರದ ರಸ್ತೆ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ 860 ಕಿ.ಮೀ. ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ಮಳೆಯಿಂದ ಕೊಚ್ಚಿ ಹೋಗಿರುವ ಮತ್ತು ಹಾಳಾಗಿರುವ ರಸ್ತೆಗಳನ್ನು ತುರ್ತಾಗಿ ದುರಸ್ತಿ ಮಾಡುವಂತೆ ಸೂಚನೆ ನೀಡಲಾಗಿದೆ. ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಪ್ರತ್ಯೇಕವಾದ ವ್ಯವಸ್ಥೆಯೊಂದನ್ನು ರೂಪಿಸುವ ಕುರಿತು ಚಿಂತನೆ ನಡೆಸಲಾಗಿದೆ’ ಎಂದರು.

ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಎಂಟು ಮೇಲ್ಸೇತುವೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿಯವರ ನಗರೋತ್ಥಾನ ಯೋಜನೆ ಮತ್ತು ಸ್ಮಾರ್ಟ್‌ ಸಿಟಿ ಯೋಜನೆಗಳ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ನಗರೋತ್ಥಾನ ಯೋಜನೆಯ ಮೂರನೇ ಹಂತದ ಕಾಮಗಾರಿಗಳನ್ನು ಗುರುತಿಸಿ, ಅಕ್ಟೋಬರ್‌ ಒಳಗಾಗಿ ಪ್ರಸ್ತಾವ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಎಲ್‌ಇಡಿ ದೀಪಕ್ಕೆ ಗಡುವು: ನಗರದಲ್ಲಿನ 4.85 ಲಕ್ಷ ಬೀದಿ ದೀಪಗಳನ್ನು ಬದಲಾವಣೆ ಮಾಡಿ ಎಲ್‌ಇಡಿ ಬೀದಿ ದೀಪ ಅಳವಡಿಸುವ ಕಾಮಗಾರಿಯ ಕುರಿತು ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬೀದಿ ದೀಪಗಳ ಬದಲಾವಣೆ ವಿಳಂಬವಾಗಿರುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

‘ಈ ವರ್ಷದ ಅಂತ್ಯದೊಳಗೆ ಮೂರು ಲಕ್ಷ ಬೀದಿ ದೀಪಗಳನ್ನು ಬದಲಾವಣೆ ಮಾಡಿ ಎಲ್‌ಇಡಿ ದೀಪಗಳನ್ನು ಅಳವಡಿಸುವಂತೆ ಗಡುವು ನೀಡಲಾಗಿದೆ’ ಎಂದು ಬೊಮ್ಮಾಯಿ ತಿಳಿಸಿದರು.

ಕೊಳವೆ ಬಾವಿ ದುರಸ್ತಿ: ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರಿರುವ 110 ಗ್ರಾಮಗಳಲ್ಲಿ 8,000 ಕೊಳವೆ ಬಾವಿಗಳಿವೆ. ಅವುಗಳಲ್ಲಿ ಸುಸ್ಥಿತಿಯಲ್ಲಿರುವ ಕೊಳವೆ ಬಾವಿಗಳನ್ನು ಗುರುತಿಸಿ, ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವಂತೆ ಬೆಂಗಳೂರು ಜಲ ಮಂಡಳಿಗೆ ಸೂಚಿಸಲಾಗಿದೆ ಎಂದರು.

‘ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ವೇಗ ತುಂಬಬೇಕಿದೆ. ಎಲ್ಲ ಕಾಮಗಾರಿಗಳನ್ನೂ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಭ್ರಷ್ಟಾಚಾರಕ್ಕೆ ಆಸ್ಪದ ನೀಡದೆ ಕೆಲಸ ಮಾಡುವಂತೆಯೂ ನಿರ್ದೇಶನ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ವಿವರಿಸಿದರು.

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅವಧಿಯಲ್ಲಿ ಆರಂಬವಾಗಿರುವ ಎಲ್ಲ ಕಾಮಗಾರಿಗಳನ್ನೂ ಮುಂದುವರಿಸಲಾಗುವುದು. ಶಾಸಕರ ಅಭಿಪ್ರಾಯಗಳಿಗೂ ಮನ್ನಣೆ ನೀಡಿ, ನಗರವನ್ನು ಪ್ರತಿನಿಧಿಸುವ ಎಲ್ಲ ಸಚಿವರ ಜತೆ ಚರ್ಚಿಸಿ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಲಾಗುವುದು ಎಂದರು.

ಸಚಿವರಾದ ಆರ್‌. ಅಶೋಕ, ಡಾ.ಸಿ.ಎನ್‌. ಅಶ್ವತ್ಥನಾರಾಯಣ, ವಿ. ಸೋಮಣ್ಣ, ಆರಗ ಜ್ಞಾನೇಂದ್ರ, ಎಸ್‌.ಟಿ. ಸೋಮಶೇಖರ್‌, ಬಿ.ಎ. ಬಸವರಾಜ, ಕೆ. ಗೋಪಾಲಯ್ಯ, ಮುನಿರತ್ನ, ಬಿಡಿಎ ಅಧ್ಯಕ್ಷ ಎಸ್‌.ಆರ್‌, ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು