ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ತಾಸು ಭವಾನಿ ರೇವಣ್ಣ ವಿಚಾರಣೆ ಮಾಡಿದ ಎಸ್‌ಐಟಿ

Published 7 ಜೂನ್ 2024, 16:27 IST
Last Updated 7 ಜೂನ್ 2024, 16:27 IST
ಅಕ್ಷರ ಗಾತ್ರ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಶುಕ್ರವಾರ ಹಾಜರಾಗಿ ವಿಚಾರಣೆ ಎದುರಿಸಿದರು.

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಮಹಿಳೆಯೊಬ್ಬರನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರನ್ನು ಬಂಧಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದ ಬೆನ್ನಲ್ಲೇ ಅವರು ಎಸ್ಐಟಿ ಎದುರು ಹಾಜರಾದರು.

‘ವಕೀಲರ ಜತೆಗೆ ಹಾಜರಾದ ಭವಾನಿ ಅವರನ್ನು 4 ಗಂಟೆ ತನಿಖಾಧಿಕಾರಿಗಳು ವಿಚಾರಣೆ ನಡೆಸಿದರು’ ಎಂದು ಮೂಲಗಳು ಹೇಳಿವೆ.

‘ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದರು. ಯಾರನ್ನೂ ನಾವು ಅಪಹರಿಸಿಲ್ಲ. ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ’ ಎಂದಷ್ಟೇ ಉತ್ತರಿಸಿದರು ಎಂದು ಗೊತ್ತಾಗಿದೆ.

‘ಭವಾನಿ ಅವರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಲಾಗಿದ್ದು ಸಮ್ಮತಿ ನೀಡಿದ್ದಾರೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಭವಾನಿ ಅವರಿಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗದೇ ಒಂದು ತಿಂಗಳಿಂದ ಅವರು ತಲೆಮರೆಸಿಕೊಂಡಿದ್ದರು. ಮೊಬೈಲ್‌ ಲೊಕೇಶನ್‌ ಆಧರಿಸಿ ಭವಾನಿ ಅವರಿಗಾಗಿ ಎಸ್‌ಐಟಿ ಹುಡುಕಾಟ ನಡೆಸಿತ್ತು. 

ಪ್ರಜ್ವಲ್‌ ಅವರು ಎಸ್‌ಐಟಿ ಕಸ್ಟಡಿಯಲ್ಲಿದ್ದು ವಿಚಾರಣೆ ಎದುರಿಸುತ್ತಿದ್ದಾರೆ. ಕಚೇರಿಯ ಸೆಲ್‌ನಲ್ಲಿಯೇ ಇದ್ದರೂ ಪತ್ರನನ್ನು ಮಾತನಾಡಿಸಲು ಸಾಧ್ಯವಾಗದೇ ಭವಾನಿ ತೆರಳಿದರು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT