ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ | ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚನೆ: ಡಾ.ಶರಣ ಪ್ರಕಾಶ್ ಪಾಟೀಲ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪರಿಶೀಲ
Published 23 ಡಿಸೆಂಬರ್ 2023, 23:30 IST
Last Updated 23 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಸಿದ್ಧತೆ ಪರಿಶೀಲಿಸಲು ವಿಕ್ಟೋರಿಯಾ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ, ಕೋವಿಡ್ ಮೊದಲ ಮತ್ತು ಎರಡನೇ ಅಲೆಯಲ್ಲಿ ಆದ ಪ್ರಮಾದಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. 

ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರ ದಾಖಲಾತಿಗೆ ಮಾಡಲಾದ ಹಾಸಿಗೆ ವ್ಯವಸ್ಥೆ, ಕೋವಿಡ್ ಪರೀಕ್ಷೆ, ಔಷಧ ದಾಸ್ತಾನು ಸೇರಿ ವಿವಿಧ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಕೋವಿಡ್ ನಿರ್ವಹಣೆಗೆ ಕೈಗೊಳ್ಳಲಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. 

‘ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಮಾಡದೆ, ಈಗಲೇ ಸೋಂಕು ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್ ನಿರ್ವಹಣೆಯಲ್ಲಿ ಉದಾಸೀನತೆ ತೋರಿದರೆ ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ವೈದ್ಯಕೀಯ ಆಮ್ಲಜನಕ ಹಾಸಿಗೆ, ವೆಂಟಿಲೇಟರ್, ಔಷಧ ಸೇರಿ ಯಾವುದಕ್ಕೂ ಕೊರತೆ ಆಗಬಾರದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳನ್ನು ಪೂರ್ಣಪ್ರಮಾಣದಲ್ಲಿ ಜಾರಿ ಮಾಡಬೇಕು. ಪರಿಸ್ಥಿತಿ ನೋಡಿಕೊಂಡು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅಣಕು ಪ್ರದರ್ಶನ ನಡೆಸಬೇಕು’ ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ವೈರಾಣುವಿನ ರೂಪಾಂತರಿ ಜೆಎನ್‌.1 ಅಷ್ಟೊಂದು ಅಪಾಯಕಾರಿಯಲ್ಲವೆಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದ್ದರಿಂದ ಜನರು ಅನಗತ್ಯವಾಗಿ ಭಯ ಭೀತರಾಗುವುದು ಬೇಡ. ಆದರೆ, ಮುಖಗವಸು ಸೇರಿ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಹೇಳಿದರು.  

‘ಇದೇ 26ರಂದು ತಾಂತ್ರಿಕ ಸಲಹಾ ಸಮಿತಿ ಹಾಗೂ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಯಾವೆಲ್ಲಾ ಅಭಿಪ್ರಾಯಗಳು ವ್ಯಕ್ತವಾಗುತ್ತವೆಯೋ ಅದರ ಮೇಲೆ ಸರ್ಕಾರ ಮುಂದಿನ ಹೆಜ್ಜೆ ಇಡಲಿದೆ’ ಎಂದು ತಿಳಿಸಿದರು.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಡೀನ್ ಡಾ. ರಮೇಶ್ ಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT