ಗುರುವಾರ , ಜುಲೈ 16, 2020
22 °C

ಸ್ನೇಹಿತನಿಗೆ ಇರಿದು ಪರಾರಿಯಾಗಿದ್ದ ಆರೋಪಿ ರೌಡಿ ಕಾಲಿಗೆ ಗುಂಡೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಮದ್ಯ ಕೊಡಲಿಲ್ಲವೆಂದು ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ರೌಡಿಯ ಕಾಲಿಗೆ ಗುಂಡು ಹೊಡೆದು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮುನಿಕೃಷ್ಣ  ಅಲಿಯಾಸ್‌ ಕಪ್ಪೆ ( 27) ಗುಂಡೇಟು ತಿಂದ ಆರೋಪಿ. ಈತನ ವಿರುದ್ಧ ಅಮೃತಹಳ್ಳಿ, ಕೊಡಿಗೇಹಳ್ಳಿ, ಜ್ಞಾನಭಾರತಿ, ಚಿಕ್ಕಜಾಲ ಪೊಲೀಸ್‌ ಠಾಣೆಗಳಲ್ಲಿ ಕೊಲೆ ಯತ್ನ, ಹಲ್ಲೆ ಸೇರಿ ಎಂಟಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಗಾನಹಳ್ಳಿ ಕಲ್ಲು ಕ್ವಾರೆಯ ಬಳಿ ಇರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ತನ್ನನ್ನು ಬಂಧಿಸಲು ಮುಂದಾದ ಪೊಲೀಸರ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆ ಮಾಡಿ ಪರಾರಿಯಾಗಲು ಮುನಿಕೃಷ್ಣ  ಯತ್ನಿಸಿದ್ದಾನೆ. ಈ ವೇಳೆ ಹೆಡ್‌ ಕಾನ್‌ಸ್ಟೆಬಲ್‌ ನಂದೀಶ್‌ ಎಂಬುವರಿಗೆ ಗಾಯವಾಗಿದೆ. ತಕ್ಷಣ ಅಮೃತಹಳ್ಳಿ ಠಾಣೆಯ ಇನ್‌ಸ್ಪೆಕ್ಟರ್‌ ಅರುಣ್‌ಕುಮಾರ್‌, ಆರೋಪಿಯ ಬಲ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಮದ್ಯ ಕೊಡಲಿಲ್ಲವೆಂದು ಸ್ನೇಹಿತನಿಗೆ ಚೂರಿಯಿಂದ ಇರಿದು ಮುನಿಕೃಷ್ಣ ಪರಾರಿಯಾಗಿದ್ದ. ಈ ಸಂಬಂಧ, ಆತನ ವಿರುದ್ಧ ಅಮೃತಹಳ್ಳಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ಪೊಲೀಸರು ತೆರಳಿದ್ದರು.

ಗಾಯಗೊಂಡಿರುವ ಮುನಿಕೃಷ್ಣ ಮತ್ತು ಹೆಡ್‌ ಕಾನ್‌ಸ್ಟೆಬಲ್‌ ನಂದೀಶ್ ಅವರನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು