ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ಬಿಜೆಪಿಯಿಂದ ಜನಮತ ವಿರೋಧಿ ದಿನ ಆಚರಣೆ

Last Updated 23 ಮೇ 2018, 7:12 IST
ಅಕ್ಷರ ಗಾತ್ರ

ಬೆಂಗಳೂರು: ’ರೈತರ ಸಾಲದ ಜೊತೆಗೆ ಖಾಸಗಿ ಸಾಲವನ್ನೂ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸದಿದ್ದರೆ, ರಾಜ್ಯವನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ’ ಎಂದು ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.

‘ಎಚ್. ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಈ ದಿನ ರಾಜ್ಯಕ್ಕೇ ಕರಾಳ ದಿನ. ಹೀಗಾಗಿ ಕಪ್ಪು ಪಟ್ಟಿ ಧರಿಸಿ ನಾವು ಹೋರಾಟ ಮಾಡುತ್ತಿದ್ದೇವೆ’ ಎಂದರು.

‘ಜೆಡಿಎಸ್—ಕಾಂಗ್ರೆಸ್ ಅಪವಿತ್ರ ಮೈತ್ರಿಯನ್ನು ಜನ ಅಪಹಾಸ್ಯ ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೇ ಕರ್ನಾಟಕದ ಜನ ನಿಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಇನ್ನು ಯಾವ ಮುಖ ಇಟ್ಟುಕೊಂಡು ಇಲ್ಲಿಗೆ ಬರ್ತಿದ್ದೀರ’ ಎಂದು ಪ್ರಶ್ನಿಸಿದರು.

‘ಬಹುಮತ ಸಿಗದಿದ್ದರೆ ವಿರೋಧ ಪಕ್ಷದಲ್ಲಿ ಕೂರುವುದಾಗಿ ಹೇಳಿದ್ದ ದೇವೇಗೌಡ ಈಗ ಮಾಡಿದ್ದೇನು? ತಾಕತ್ತಿದ್ದರೆ, ಈಗಲೂ ಜನರ ಮುಂದೆ ಹೋಗೋಣ ಬನ್ನಿ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಪಡೆಯದಿದ್ದರೆ ನನ್ನ ಹೆಸರು ಬದಲಿಸಿಕೊಳ್ಳುತ್ತೇನೆ’ ಎಂದು ಸವಾಲು ಹಾಕಿದರು.

ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಟೀಕಿಸಿ ಬಿಜೆಪಿ ಬೆಂಗಳೂರಿನಲ್ಲಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.

ಕಪ್ಪು ಪಟ್ಟಿ ತೊಟ್ಟು ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ  ಬಿ.ಎಸ್. ಯಡಿಯೂರಪ್ಪ, ಆರ್.ಅಶೋಕ, ಶೋಭಾ‌ಕರಂದ್ಲಾಜೆ, ರವಿಕುಮಾರ್ ಭಾಗಿಯಾಗಿದ್ದರು.

ರಾಜ್ಯದ ವಿವಿಧ ಕಡೆಗಳಲ್ಲೂ ಬಿಜೆಪಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.

ಕಲಬುರ್ಗಿ: ಕಾಂಗ್ರೆಸ್ ಮತ್ತು ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಜನಾದೇಶದ ವಿರುದ್ಧ ಸರ್ಕಾರ ರಚಿಸುತ್ತಿವೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.ಶಾಸಕ ಬಿ.ಜಿ.ಪಾಟೀಲ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿದರು.

ಶಿರಸಿ: ಕಾಂಗ್ರೆಸ್ ಮತ್ತು ಜೆಡಿಎಸ್ ನ ಮೈತ್ರಿ ಸರ್ಕಾರ ರಚನೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಇಲ್ಲಿ ಕರಾಳ ದಿನ ಆಚರಿಸಿದರು. ಇಲ್ಲಿನ ಹಳೆ ಬಸ್ ನಿಲ್ದಾಣದ ಎದುರು ಜಮಾಯಿಸಿದ್ದ ಬಿಜೆಪಿ‌ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಘೋಷಣೆ ಕೂಗಿದರು. ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಹುಬ್ಬಳ್ಳಿ: ಕಾಂಗ್ರೆಸ್‌ - ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪ್ರಜಾಪ್ರಭುತ್ವದ ಅಣಕ ವಾಗಿದ್ದು, ಕೆಲವೇ ತಿಂಗಳುಗಳಲ್ಲಿ ಪತನವಾಗಲಿದೆ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು. ಸಮ್ಮಿಶ್ರ ಸರ್ಕಾರ ರಚನೆ ವಿರುದ್ಧ ಪಕ್ಷದ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ, ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT