ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ: ವೈದ್ಯಕೀಯ ಸೇವೆ ವ್ಯತ್ಯಯ

Published 4 ಮೇ 2023, 20:52 IST
Last Updated 4 ಮೇ 2023, 20:52 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ ಸಿಬ್ಬಂದಿಯನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿಕೊಂಡಿರುವುದರಿಂದ ಇಲ್ಲಿನ ಜಯನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಇಂದಿರಾನಗರದ ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಗುರುವಾರ ಸಮಸ್ಯೆ ಎದುರಿಸಿದರು. 

ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಚುನಾವಣೆ ಕರ್ತವ್ಯಕ್ಕೆ ವಿನಾಯಿತಿ ನೀಡುವಂತೆ ಇಲಾಖೆಯ ಆಯುಕ್ತ ಡಿ. ರಂದೀಪ್ ಅವರು ಜಿಲ್ಲಾ ಚುನಾವಣಾಧಿಕಾರಿಗೆ ಕಳೆದ ತಿಂಗಳು ಪತ್ರ ಬರೆದಿದ್ದರು.

‘ಚುನಾವಣೆ ಕರ್ತವ್ಯಕ್ಕೆ ವೈದ್ಯಕೀಯ ಸಿಬ್ಬಂದಿ ನಿಯೋಜಿಸಿದಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಸಮಸ್ಯೆಯಾಗುತ್ತದೆ’ ಎಂದು ಹೇಳಿದ್ದರು. ಆದರೆ, ವೈದ್ಯಕೀಯ ಸಿಬ್ಬಂದಿಗೆ ವಿನಾಯಿತಿ ನೀಡದಿದ್ದರಿಂದ ನಗರದ ಎರಡು ಪ್ರಮುಖ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಹೊರತುಪಡಿಸಿ, ಉಳಿದ ಎಲ್ಲ ಸೇವೆಗಳಲ್ಲಿ ವ್ಯತ್ಯಯವಾಯಿತು. 

ಸೇವೆ ವ್ಯತ್ಯಯದ ಬಗ್ಗೆ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಕಟಣೆ ಹಾಕಲಾಗಿತ್ತು. ‘ಇದೇ 4ರಿಂದ 10ರ ವರೆಗೆ ಆಸ್ಪತ್ರೆಯ ಸಿಬ್ಬಂದಿಯನ್ನು ಚುನಾವಣೆ ಕಾರ್ಯಗಳಿಗೆ ನಿಯೋಜಿಸಲಾಗಿದೆ. ತುರ್ತು ಸೇವೆಗಳು ಹೊರತುಪಡಿಸಿ ಉಳಿದ ಸೇವೆಗಳು ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು’ ಎಂದು ಮನವಿ ಮಾಡಿಕೊಳ್ಳಲಾಗಿತ್ತು. ಈ ಬಗ್ಗೆ ಮಾಹಿತಿ ಇಲ್ಲದ ಕಾರಣ ರೋಗಿಗಳು ಚಿಕಿತ್ಸೆಗೆ ಪರದಾಡಿದರು. 

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ 74 ಶುಶ್ರೂಷಕರಲ್ಲಿ ಮೂವರು ಮಾತ್ರ ಹಾಜರಿದ್ದರು. ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ 72 ಶುಶ್ರೂಷಕರಲ್ಲಿ ಐವರು ಕಾರ್ಯನಿರ್ವಹಿಸಿದ್ದಾರೆ. ಉಳಿದ ಶುಶ್ರೂಷಕರು, ಔಷಧ ವಿತರಕರು, ಪ್ರಯೋಗಾಲಯ ಸಿಬ್ಬಂದಿ ಸೇರಿ ವಿವಿಧ ವಿಭಾಗದ ಸಿಬ್ಬಂದಿ ಚುನಾವಣೆ ಕರ್ತವ್ಯದ ಪ್ರಯುಕ್ತ ತರಬೇತಿಗೆ ತೆರಳಿದ್ದರು.

ಜಯನಗರ ಸಾರ್ವಜನಿಕ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ಗುರುವಾರ 730 ಮಂದಿ ಭೇಟಿ ನೀಡಿದ್ದಾರೆ. ಇವರಲ್ಲಿ ಕೆಲವರು ಚಿಕಿತ್ಸೆಗಾಗಿ ಗಂಟೆಗಟ್ಟಲೆ ಕಾದರೆ, ಇನ್ನೂ ಕೆಲವರು ಖಾಸಗಿ ಆಸ್ಪತ್ರೆಗಳಿಗೆ ತೆರಳಿದರು. 

‘ಆಸ್ಪತ್ರೆ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿಕೊಂಡರೆ ರೋಗಿಗಳ ಚಿಕಿತ್ಸೆಯಲ್ಲಿ ವ್ಯತ್ಯಯವಾಗಲಿದೆ. ಚುನಾವಣಾ ಆಯೋಗ ಇದನ್ನು ಅರಿತು, ವೈದ್ಯಕೀಯ ಸಿಬ್ಬಂದಿಗೆ ವಿನಾಯಿತಿ ನೀಡಬೇಕು’ ಎಂದು ಸರ್.ಸಿ.ವಿ. ರಾಮನ್ ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT