ಬೆಂಗಳೂರು: ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹ ಹವ್ಯಾಸವನ್ನು ಉತ್ತೇಜಿಸಲು ಅಂಚೆ ಇಲಾಖೆ ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ಯಡಿ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 2023–24ರ ಶೈಕ್ಷಣಿಕ ವರ್ಷದ ಪರೀಕ್ಷೆಯಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಫಿಲಾಟೆಲಿಕ್ ಕ್ಲಬ್‌ನ ಸದಸ್ಯರಾಗಿರಬೇಕು ಅಥವಾ ತನ್ನದೇ ಆದ ಅಂಚೆ ಚೀಟಿಯ ಸಂಗ್ರಹ ಖಾತೆಯನ್ನು ಹೊಂದಿರಬೇಕು.
ಹಂತ 1ರ ವಿದ್ಯಾರ್ಥಿ ವೇತನಕ್ಕೆ ಅರ್ಜಿಸಲ್ಲಿಸುವ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಕುರಿತ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗುತ್ತದೆ. ಸ್ಪರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ₹6 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಆಸಕ್ತರು ಸೆಪ್ಟೆಂಬರ್ 3ರ ಒಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ ವಿವರಗಳಿಗಾಗಿ www.inidapost.gov.in ಮತ್ತು www.karnatakapost.gov.in ಗೆ ಭೇಟಿ ನೀಡಬಹುದು.