ಮಂಗಳವಾರ, ಅಕ್ಟೋಬರ್ 27, 2020
28 °C
ಪರಿಶೀಲನೆಗೆ ತಂಡ ರಚನೆ

ನಗರ ಸ್ಥಳೀಯ ಸಂಸ್ಥೆ: ಮೀಸಲಾತಿಗೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ ಮಾಡಿ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್‌ ಏಕಸದಸ್ಯ ಪೀಠ ತಡೆ ನೀಡಿದ್ದು, ರೋಸ್ಟರ್ ನಿಯಮ ಪಾಲನೆಯಾಗಿದೆಯೇ ಎಂಬುದನ್ನು ಪರಿಶೀಲಿಸಲು ತ್ರಿಸದಸ್ಯ ಸಮಿತಿ ರಚನೆ ಮಾಡಿದೆ.

58 ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿ ಮಾಡಿ ಅ.8ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಹಾಸನ ನಗರಸಭೆ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ನಿಗದಿ ಮಾಡಿರುವುದನ್ನು ಪ್ರಶ್ನಿಸಿ ಸದಸ್ಯ ಕೆ.ವಿ. ಚಂದ್ರಗೌಡ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೇವದಾಸ್ ಅವರಿದ್ದ ಏಕ ಸದಸ್ಯ ಪೀಠ, ಮೀಸಲಾತಿ ಅಧಿಸೂಚನೆಗೆ ತಡೆ ನೀಡಿದೆ.

ಮೀಸಲು ಪಟ್ಟಿ ಪರಿಶೀಲನೆಗೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ರಾಜ್ಯ ಚುನಾವಣಾ ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ,  ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ಅವರನ್ನು ಒಳಗೊಂಡ ಸಮಿತಿ ರಚನೆ ಮಾಡಿದೆ. ರೋಸ್ಟರ್ ಪ್ರಕಾರ ಕರಡು ಮೀಸಲಾತಿ ಪಟ್ಟಿ ರಚಿಸಿ ಅಕ್ಟೋಬರ್ 22ರೊಳಗೆ ಸಲ್ಲಿಸುವಂತೆ ಪೀಠ ತಿಳಿಸಿದೆ.

ಹಾಸನ ನಗರಸಭೆಯ 35 ಸದಸ್ಯರ ಪೈಕಿ ಜೆಡಿಎಸ್‌ನ 17 ಸದಸ್ಯರಿದ್ದು, ಅಧ್ಯಕ್ಷ ಸ್ಥಾನ ತಪ್ಪಿಸುವ ಸಲುವಾಗಿಯೇ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನಿಗದಿ ಮಾಡಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು