ಬೆಂಗಳೂರು: ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ನಾಯಿ ದಾಳಿಯಿಂದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.
ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಾಯುಸೇನೆ ನೆಲೆಯ ಏಳನೇ ವಸತಿಗೃಹಗಳ ಕ್ಯಾಂಪ್‌ನಲ್ಲಿ ಬುಧವಾರ ಬೆಳಿಗ್ಗೆ 6.30ರ ಸುಮಾರಿಗೆ ನಿವೃತ್ತ ಶಿಕ್ಷಕಿಯೊಬ್ಬರು (76)
ವಾಕಿಂಗ್ ಮಾಡುತ್ತಿದ್ದರು. ಅವರ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು. ಮೃತಪಟ್ಟವರು ವಾಯುಸೇನೆ ಯೋಧರರೊಬ್ಬರ ಅತ್ತೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ಭಾಗದಲ್ಲಿ ಬೀದಿ ನಾಯಿ ಹೆಚ್ಚಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.