ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾತ್ರಿ ಕರ್ಫ್ಯೂ ಕಟ್ಟುನಿಟ್ಟಿನ ಜಾರಿ

ಕೋವಿಡ್‌ ನಿಯಂತ್ರಣಕ್ಕೆ ಬಿಬಿಎಂಪಿ– ಪೊಲೀಸ್‌ ಇಲಾಖೆ ಜಂಟಿ ಕ್ರಮ
Last Updated 29 ಡಿಸೆಂಬರ್ 2021, 19:36 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ನಿರ್ಬಂಧಗಳ ಕಟ್ಟುನಿಟ್ಟಿನ ಜಾರಿಗೆ ಬಿಬಿಎಂಪಿ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು. ಕೋವಿಡ್ ರೂಪಾಂತರಿ ವೈರಾಣು ಓಮೈಕ್ರಾನ್‌ ಹರಡುವಿಕೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಬಿಬಿಎಂಪಿ ಮುಖ್ಯ ಆಯಕ್ತ ಗೌರವ್ ಗುಪ್ತ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಓಮೈಕ್ರಾನ್‌ ಸೋಂಕು ನಿಯಂತ್ರಿಸುವ ಸಂಬಂಧ ಬುಧವಾರ ಏರ್ಪಡಿಸಿದ್ದ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ಜಂಟಿ ಸಭೆಯಲ್ಲಿ ಅವರು ಮಾತನಾಡಿದರು.

‘ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಸರಾಸರಿ 250 ಕೋವಿಡ್ ಪ್ರಕರಣಗಳು ಕಂಡುಬರುತ್ತಿದೆ. ಇದನ್ನು ನಿಯಂತ್ರಿಸಬೇಕಾದರೆ ಕೋವಿಡ್‌ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲೇ ಬೇಕಾಗಿದೆ. ರೆಸ್ಟೋರೆಂಟ್, ಕ್ಲಬ್, ಪಬ್‌ಗಳಲ್ಲಿ ಶೇ 50ಕ್ಕಿಂತ ಹೆಚ್ಚು ಆಸನಗಳ ಭರ್ತಿಗೆ ಅವಕಾಶ ನೀಡಬಾರದು.ಇವುಗಳಿಗೆ ಭೇಟಿ ನೀಡುವ ಸಾರ್ವಜನಿಕರು ಲಸಿಕೆಯ ಎರಡೂ ಡೋಸ್ ಪಡೆದಿದ್ದರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯನ್ನು ಆಗಾಗ ಕಡ್ಡಾಯವಾಗಿ
ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು. ಅವರು ಸೋಂಕು ಹೊಂದಿಲ್ಲದಿದ್ದರೆ ಹಾಗೂ ಕೋವಿಡ್‌ ಲಸಿಕೆಯ ಎರಡೂ ಡೋಸ್
ಪಡೆದಿದ್ದರೆ ಮಾತ್ರ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಬೇಕು’ ಎಂದು ಹೇಳಿದರು.

‘ಮಾರುಕಟ್ಟೆ, ಪಿ.ಜಿ (ಪೇಯಿಂಗ್ ಗೆಸ್ಟ್), ಹಾಸ್ಟೆಲ್, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಬೇಕು. ಕೋವಿಡ್‌ ನಿಯಮ ಉಲ್ಲಂಘಿಸದಂತೆ ಎಚ್ಚರಿಕೆ ವಹಿಸಬೇಕು. ಹೊಸ ವರ್ಷಾಚರಣೆಯ ಸಂದರ್ಭದಲ್ಲಿಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಂತ್ರಣ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳಲು ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು’ ಎಂದು ಸೂಚನೆ ನೀಡಿದರು.

ಬಿಬಿಎಂಪಿಯ ಆಡಳಿತಾಧಿಕಾರಿ ರಾಕೇಶ್ ಸಿಂಗ್, ‘ರಾತ್ರಿ 10ರ ನಂತರ ಹೊಸ ವರ್ಷಾರಣೆಯ ಸಂಭ್ರಮ, ಸಭೆ ಸಮಾರಂಭ ಮಾಡುವುದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ನಗರ ಪೊಲೀಸ್ ಕಮಿಷನರ್‌ ಕಮಲ್ ಪಂತ್, ‘ನಗರದಲ್ಲಿ ರಾತ್ರಿ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಅಧಿಕಾರಿಗಳ ಮೇಲಿದೆ’ ಎಂದರು

ಬಿಬಿಎಂಪಿ ವಿಶೇಷ ಆಯುಕ್ತ(ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ಮುರುಗನ್, ಸೌಮ್ಯೇಂದು ಮುಖರ್ಜಿ, ಎಲ್ಲಾ ವಲಯ ಜಂಟಿ ಕಮಿಷನರ್‌ಗಳು, ಡಿಸಿಪಿಗಳು, ಬಿಬಿಎಂಪಿಯ ವಲಯ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT