ಭಾನುವಾರ, ಅಕ್ಟೋಬರ್ 17, 2021
23 °C

ರೈತರ ಹತ್ಯೆ: ಸಚಿವರ ವಜಾಕ್ಕಾಗಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಉತ್ತರ ಪ್ರದೇಶದ ಲಖಿಂಪುರ್– ಖೇರಿ ಜಿಲ್ಲೆಯಲ್ಲಿ ನಡೆದ ರೈತರ ಹತ್ಯೆಗೆ ಕಾರಣವಾಗಿರುವ ಕೇಂದ್ರ ಸಚಿವ ಅಜಯ್‌ ಕುಮಾರ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ–ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ್ದ ಪ್ರತಿಭಟನಕಾರರು, ರೈತರ ಹತ್ಯೆಯನ್ನು ಖಂಡಿಸಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಕೆ. ಉಮಾ, ‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿ ಹತ್ಯೆ ಮಾಡಿರುವುದು ಅಮಾನೀಯ. ಇದನ್ನು ನಾವೆಲ್ಲರೂ ಖಂಡಿಸುತ್ತೇವೆ’ ಎಂದರು.

‘ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರ, ತಮ್ಮನ್ನು ಪ್ರಶ್ನಿಸುವವರ ಬಾಯಿ ಮುಚ್ಚಿಸುವ ಹಿಂಸಾತ್ಮಕ ದಾಳಿಯಲ್ಲಿ ತೊಡಗಿದೆ. ಇಂತಹ ಜನ ವಿರೋಧಿ ಸರ್ಕಾರಗಳಿಗೆ ಅಧಿಕಾರ ನಡೆಸಲು ಯಾವುದೇ ನೈತಿಕ ಹಕ್ಕಿಲ್ಲ. ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳು, ಕೋಮು ಗಲಭೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ’ ಎಂದೂ ದೂರಿದರು.

ಪಕ್ಷದ ಸದಸ್ಯ ವಿ. ಜ್ಞಾನಮೂರ್ತಿ, ‘ಬಿಜೆಪಿ ಸರ್ಕಾರ, ರೈತ ಹಾಗೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ದೇಶದಲ್ಲಿ ಇದುವರೆಗೂ ನಾಲ್ಕು ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತಪರ ಕಾಳಜಿ ಇಲ್ಲದ ಕೇಂದ್ರ ಸರ್ಕಾರ, ಬಹುರಾಷ್ಟ್ರೀಯ ಕಂಪನಿಗಳ ಸೇವೆ ಮಾಡುತ್ತಿದೆ. ಇಂಥ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು