‘ಎಂಬಿಬಿಎಸ್ ಅಂತಿಮ ವರ್ಷದ ಪರೀಕ್ಷೆ ಮುಂದೂಡಿ’
ಬೆಂಗಳೂರು: ಎಂಬಿಬಿಎಸ್ ಅಂತಿಮ ವರ್ಷದ ಪರೀಕ್ಷೆಯನ್ನು ಮುಂದೂಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಯವರಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಅವರು ಮಂಗಳವಾರ ಟ್ವೀಟ್ ಮಾಡಿದ್ದಾರೆ.
‘ಎಂಬಿಬಿಎಸ್ ಅಂತಿಮ ವರ್ಷದ ಪರೀಕ್ಷೆಯು ಇದೇ 22ರಂದು ನಿಗದಿಯಾಗಿದೆ. ಕೋವಿಡ್‌ನಿಂದಾಗಿ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಲು ವಿದ್ಯಾರ್ಥಿಗಳಿಗೆ ಸಮಯ ಸಿಕ್ಕಿಲ್ಲ ಎಂಬ ದೂರುಗಳು ಕೇಳಿ ಬಂದಿವೆ. ಹೀಗಾಗಿ ಪರೀಕ್ಷೆಯನ್ನು ಮುಂದೂಡಿ ಪರಿಷ್ಕೃತ ದಿನಾಂಕ ಪ್ರಕಟಿಸುವಂತೆ ಸೂಚಿಸಿದ್ದೇನೆ’ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಪರೀಕ್ಷೆ ಮುಂದೂಡುವಂತೆ ಕೋರಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ತಮಗೆ ಬರೆದಿರುವ ಪತ್ರದ ಬಗ್ಗೆಯೂ ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
‘ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮೇ ತಿಂಗಳಿನಲ್ಲಿ ತರಗತಿ ಪ್ರಾರಂಭಿಸಲಾಗಿದ್ದು, ಜುಲೈವರೆಗೂ ಆನ್‌ಲೈನ್‌ನಲ್ಲೇ ಪಾಠ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆಯಾಗಿದೆ ಎಂದು ಹೇಳಿ ಹಲವು ವಿದ್ಯಾರ್ಥಿಗಳನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಕೋವಿಡ್ ಮೂರನೇ ಅಲೆಯ ವೇಳೆಯೂ ಹಲವರು ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಹೀಗಾಗಿ ಪರೀಕ್ಷಾ ಸಿದ್ಧತೆಗೆ ಸಮಯವೇ ಸಿಕ್ಕಿಲ್ಲ ಎಂದು ಎಐಡಿಎಸ್‌ಒ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ. ಪರೀಕ್ಷಾ ಸಿದ್ಧತೆಗೆ ಬೇಕಾದಷ್ಟು ಕಾಲಾವಕಾಶವನ್ನು ವಿದ್ಯಾರ್ಥಿಗಳಿಗೆ ನೀಡುವಂತೆಯೂ ಮನವಿ ಮಾಡಿದೆ. ಇದನ್ನು ಪರಿಗಣಿಸಿ ಪರೀಕ್ಷೆ ಮುಂದೂಡಲು ಕ್ರಮ ಕೈಗೊಳ್ಳಿ’ ಎಂದು ಕುಲಪತಿಯವರಿಗೆ ಬರೆದಿರುವ ಪತ್ರದಲ್ಲಿ ಸುಧಾಕರ್ ವಿವರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.