ಗುರುವಾರ , ಜೂನ್ 24, 2021
29 °C
ಪ್ರಧಾನಿ ಜೊತೆಗಿನ ಸಂವಾದದಲ್ಲಿ ಬೇಡಿಕೆ ಇಟ್ಟ ಬಿಬಿಎಂಪಿ ಮುಖ್ಯ ಆಯುಕ್ತ

ಆಮ್ಲಜನಕ, ಲಸಿಕೆ ಪೂರೈಕೆ ಹೆಚ್ಚಿಸಿ: ಪ್ರಧಾನಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಬೇಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಕೊವಿಡ್‌ ಲಸಿಕೆ ಹಾಗೂ ಆಮ್ಲಜನಕ ಪೂರೈಕೆ ಹೆಚ್ಚು ಮಾಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಿದ್ದಾರೆ.

ಕೋವಿಡ್‌ ನಿಯಂತ್ರಣ ಕುರಿತು ಪ್ರಧಾನಿ ಜೊತೆಗೆ ಮಂಗಳವಾರ ಏರ್ಪಡಿಸಿದ್ದ ವಿಡಿಯೊ ಸಂವಾದದಲ್ಲಿ ಮುಖ್ಯ ಆಯುಕ್ತರು ಭಾಗವಹಿಸಿದರು. ಸೋಂಕು ಹರಡುವಿಕೆ ತಡೆಯಲು ಬಿಬಿಎಂಪಿ ಕೈಗೊಂಡ ಕ್ರಮಗಳನ್ನು ವಿವರಿಸಿದರು.

‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ ಲಸಿಕೆ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ. ಇನ್ನಷ್ಟು ಲಸಿಕೆ ಅವಶ್ಯಕತೆ ಇದೆ. ಹಾಗಾಗಿ ಲಸಿಕೆ ಪೂರೈಕೆ ಪ್ರಮಾಣವನ್ನು ಹೆಚ್ಚಿಸುವಂತೆ ಪ್ರಧಾನಿ ಅವರ ಬಳಿ ಕೋರಿದ್ದೇವೆ. ನಗರದಲ್ಲಿ ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಆಮ್ಲಜನಕದ ಕೊರತೆ ಇರುವುದನ್ನೂ ಗಮನಕ್ಕೆ ತಂದಿದ್ದೇವೆ’ ಎಂದು ಗೌರವ್‌ ಗುಪ್ತ ಸುದ್ದಿಗಾರರಿಗೆ ತಿಳಿಸಿದರು.

‘ಲಸಿಕೆಯ ಕೊರತೆಯನ್ನು ಸ್ಥಳೀಯವಾಗಿ ನಿವಾರಿಸಿಕೊಳ್ಳಬೇಕು. ಕೇಂದ್ರ ಸರ್ಕಾರದ ವತಿಯಿಂದ ರಾಜ್ಯಗಳಿಗೆ ಲಸಿಕೆ ಪೂರೈಕೆಗೆ ಈಗಾಗಲೇ ಕ್ರಮ ಕೈಗೊಂಡಿದ್ದೇವೆ. ಇನ್ನಷ್ಟು ಲಸಿಕೆ ಲಭ್ಯವಾಗಲಿದೆ ಎಂದು ಪ್ರಧಾನಿ ಅವರು ಭರವಸೆ ನೀಡಿದ್ದಾರೆ’ ಎಂದರು.

‘ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರ್ಧರಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ವ್ಯವಸ್ಥೆ ಬಗ್ಗೆ ವಿವರಿಸಿದ್ದೇವೆ. ಇಲ್ಲಿ ಕೋವಿಡ್‌ ಮಾಹಿತಿ ನಿರ್ವಹಣೆಗೆ ಮಡಿಕೊಂಡ ವ್ಯವಸ್ಥೆ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದೇವೆ’ ಎಂದು ತಿಳಿಸಿದರು.

‘ಕೋವಿಡ್‌ ನಿಯಂತ್ರಣಕ್ಕೆ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ವಿವಿಧ ಪ್ರದೇಶಗಳಲ್ಲಿ ಕೈಗೊಂಡ ಯಶಸ್ವಿ ಕ್ರಮಗಳನ್ನು ಇತರರೂ ಸದ್ಬಳಕೆ ಮಾಡಿಕೊಳ್ಳಬೇಕು. ಇದೊಂದು ದೊಡ್ಡ ಯುದ್ಧ. ಈ ದೇಶದ ಎಲ್ಲರೂ ಒಟ್ಟಾಗಿ ಇದನ್ನು ಎದುರಿಸಬೇಕು ಎಂಬುದಾಗಿ ಪ್ರಧಾನಿ ಸಲಹೆ ನೀಡಿದರು’ ಎಂದು ಅವರು ತಿಳಿಸಿದರು.    

ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರೂ ವಿಡಿಯೊ ಸಂವಾದದಲ್ಲಿ ಭಾಗವಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು