ಬೆಂಗಳೂರು: ಅಮಾನತಾಗಿದ್ದ ಇನ್‌ಸ್ಪೆಕ್ಟರ್ ಹೃದಯಾಘಾತದಿಂದ ಸಾವು

ಬೆಂಗಳೂರು: ಕರ್ತವ್ಯ ಲೋಪ ಎಸಗಿದ್ದ ಆರೋಪದಡಿ ಇತ್ತೀಚೆಗಷ್ಟೇ ಸೇವೆಯಿಂದ ಅಮಾನತಾಗಿದ್ದ ಕೆ.ಆರ್.ಪುರ ಠಾಣೆ ಇನ್‌ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರು ಹೃದಯಾಘಾತದಿಂದಾಗಿ ಗುರುವಾರ ಮೃತಪಟ್ಟರು.
ಠಾಣೆ ವ್ಯಾಪ್ತಿಯಲ್ಲಿದ್ದ ಟಾನಿಕ್ ಬಾರ್ ಆ್ಯಂಡ್ ರೆಸ್ಟೋರೆಂಟ್ ತಡರಾತ್ರಿ 2 ಗಂಟೆಯವರೆಗೂ ತೆರೆದಿತ್ತು. ಸಿಸಿಬಿ ದಾಳಿ ಮಾಡಿ, ಮಾಲೀಕರು ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಅವಧಿ ಮೀರಿ ವಹಿವಾಟು ನಡೆಸುತ್ತಿದ್ದರೂ ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಅವರನ್ನು ಕಮಿಷನರ್ ಪ್ರತಾಪ್ ರೆಡ್ಡಿ ಅವರು ಸೇವೆಯಿಂದ ಅಮಾನತು ಮಾಡಿದ್ದರು.
ಅಮಾನತು ಅವಧಿಯಲ್ಲಿ ನಂದೀಶ್ ಅವರು ಮನೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದರು. ಗುರುವಾರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಟುಂಬಸ್ಥರು ಲಕ್ಷ್ಮಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಗುಂಡ್ಲುಪೇಟೆಯ ನಂದೀಶ್ 2003ರಲ್ಲಿ ಪಿಎಸ್ಐ ಆಗಿ ವೃತ್ತಿ ಆರಂಭಿಸಿದ್ದರು. ಇನ್‌ಸ್ಪೆಕ್ಟರ್ ಹುದ್ದೆಗೆ ಬಡ್ತಿ ಪಡೆದು ಪರಪ್ಪನ ಅಗ್ರಹಾರ, ಆರ್.ಟಿ.ನಗರ ಹಾಗೂ ಇತರೆ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.