ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹೆಚ್ಚುವರಿ ಟೆಂಟ್‌ ಶಾಲೆ ತೆರೆಯಲು ನಿರ್ದೇಶನ’

Last Updated 5 ಸೆಪ್ಟೆಂಬರ್ 2019, 19:54 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರಗಳಿಗೆ ವಲಸೆ ಬರುವ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸಲು ಹೆಚ್ಚುವರಿ ಟೆಂಟ್ ಶಾಲೆಗಳನ್ನು ತೆರೆಯುವಂತೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಜಿಲ್ಲಾ ಉಪ ನಿರ್ದೇಶಕರಿಗೆ ನಿರ್ದೇಶಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಈ ಸಂಬಂಧ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಪೀಠಕ್ಕೆ ಸವಿವರ ಮಾಹಿತಿ ಸಲ್ಲಿಸಿದರು.

ವರದಿಯಲ್ಲಿ ಏನಿದೆ?: ‘ಶಾಲೆಯಿಂದ ಹೊರಗುಳಿದ 6ರಿಂದ 14 ವರ್ಷದ 16,853 ಮಕ್ಕಳ ಪೈಕಿ 3,828 ಮಕ್ಕಳನ್ನು ಈಗಾಗಲೇ ಶಾಲೆಗೆ ಸೇರಿಸಲಾಗಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ಬೆಂಗಳೂರು ವ್ಯಾಪ್ತಿಯ ಕೊಳೆಗೇರಿಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳ ಮಕ್ಕಳು ಶಾಲೆಯಿಂದ ಹೊರಗುಳಿದ ಬಗ್ಗೆ ಪ್ರತಿ ತಿಂಗಳು 13 ಮತ್ತು 14ರಂದು ರಾತ್ರಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರನ್ವಯ ಕಳೆದ ತಿಂಗಳು 13 ಮತ್ತು 14ರಂದು ನಡೆಸಿದ ಸಮೀಕ್ಷೆಯಲ್ಲಿ ಶಾಲೆಯಿಂದ ಹೊರಗುಳಿದ 415 ಮಕ್ಕಳನ್ನು ಗುರುತಿಸಲಾಗಿದೆ. 2019–20ನೇ ಶೈಕ್ಷಣಿಕ ಸಾಲಿಗಾಗಿ ಸರ್ಕಾರ ಟೆಂಟ್ ಶಾಲೆಗಳನ್ನು ನಡೆಸುತ್ತಿದೆ. ಅದರಲ್ಲಿ ಬೆಂಗಳೂರು ದಕ್ಷಿಣದ 3 ಹಾಗೂ 4ನೇ ಬ್ಲಾಕ್‌ನ 193 ಮಕ್ಕಳನ್ನು ದಾಖಲಿಸಿಕೊಳ್ಳಲಾಗಿದೆ’ ಎಂದು ವಿವರಿಸಲಾಗಿದೆ.

‘ಜಿಲ್ಲಾ ಮಟ್ಟದಲ್ಲಿ ಅಂಗನವಾಡಿ ಅಥವಾ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಆದೇಶ ನೀಡುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ’ ಎಂದೂ ವರದಿಯಲ್ಲಿ ತಿಳಿಸಲಾಗಿದೆ. ವಿಚಾರಣೆಯನ್ನು ಇದೇ 11ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT