ಸೋಮವಾರ, ಜನವರಿ 25, 2021
27 °C

ಭೂಹಗರಣ ತನಿಖೆ ವಿವರ ಕೇಳಿದ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ₹500 ಕೋಟಿ ಮೌಲ್ಯದ ಭೂ ಹಗರಣದ ಬಗ್ಗೆ ಸಲ್ಲಿಕೆಯಾಗಿರುವ ದೂರು ಆಧರಿಸಿ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಭಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಹೈಕೋರ್ಟ್‌ ನಿರ್ದೇಶನ ನೀಡಿದೆ.

ಭೂ ಹಗರಣದ ಆರೋಪದ ಬಗ್ಗೆ ಯಾವುದೇ ಕ್ರಮಗಳನ್ನು ಎಸಿಬಿ ಕೈಗೊಂಡಿಲ್ಲ ಎಂದು ಆರೋಪಿಸಿ ಬೆಂಗಳೂರಿನ ಕೃಷ್ಣ ರಾಮಯ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಇದರ ವಿಚಾರಣೆ ನಡೆಸಿತು. ಡಿ.11ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಎಸಿಬಿಗೆ ಸೂಚನೆ ನೀಡಿತು.

‘ಸರ್ಕಾರಿ ಜಮೀನಿನ ಒಂದು ದೊಡ್ಡ ಭಾಗವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ಖಾಸಗಿ ವಾಹಿನಿಗಳಲ್ಲಿ ಸುದ್ದಿ ಪ್ರಸಾರವಾದ ನಂತರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಆಗಿದ್ದ ಎನ್. ಮಂಜುನಾಥ ಪ್ರಸಾದ್ ಅವರು 2020ರ ಜುಲೈನಲ್ಲಿ ವಿಚಾರಣೆ ನಡೆಸಿದ್ದಾರೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

‘ಕನ್ನಳ್ಳಿ, ಲಕ್ಷ್ಮಿಪುರ, ಕೊಡಿಗೇಹಳ್ಳಿ, ಗೌಡಹಳ್ಳಿ ಮತ್ತು ಬೆಂಗಳೂರು ಉತ್ತರ ತಾಲ್ಲೂಕಿನ ಬೀದರಹಳ್ಳಿ, ಬೆಂಗಳೂರು ಪೂರ್ವ ತಾಲ್ಲೂಕಿನ ಕೈಲಾಸಹಳ್ಳಿ ಮತ್ತು ಭೋಗನಹಳ್ಳಿ, ಬೆಟ್ಟಹಲಸೂರು ಸುತ್ತಮುತ್ತ ಸುಮಾರು 37 ಎಕರೆ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡಲಾಗಿದೆ’ ಎಂದು ಮಂಜುನಾಥ ಪ್ರಸಾದ್ ವರದಿ ಸಲ್ಲಿಸಿದ್ದರು.

ಈ ವರದಿ ಆಧರಿಸಿ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್‌ ನಿರ್ದೇಶನ ನೀಡಿತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು