ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ಪ್ರಾಸಿಕ್ಯೂಟರ್‌ ಆಗಿ ಎಸ್. ಬಾಲಕೃಷ್ಣನ್ ನೇಮಕ: ಅಧಿಸೂಚನೆಗೆ ಹೈಕೋರ್ಟ್ ತಡೆ

Published 8 ಏಪ್ರಿಲ್ 2024, 13:14 IST
Last Updated 8 ಏಪ್ರಿಲ್ 2024, 13:14 IST
ಅಕ್ಷರ ಗಾತ್ರ

ಬೆಂಗಳೂರು: ದ್ವೇಷ ಭಾಷಣ ಮಾಡಿದ ಆರೋಪದಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ಎಸ್.ಬಾಲಕೃಷ್ಣನ್ ಅವರನ್ನು ವಿಶೇಷ ಪ್ರಾಸಿಕ್ಯೂಟರ್‌ ಆಗಿ ನೇಮಕ ಮಾಡಿದ್ದ ರಾಜ್ಯ ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಡಾ.ಕಲ್ಲಡ್ಕ ಪ್ರಭಾಕರ ಭಟ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಭಾಕರ ಭಟ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್‌, ‘ರಾಜ್ಯ ಸರ್ಕಾರ ಏಪ್ರಿಲ್ 7ರಂದು ಹೊರಡಿಸಿರುವ ಅಧಿಸೂಚನೆ ವಿವೇಚನಾರಹಿತ, ಏಕಪಕ್ಷೀಯ ಮತ್ತು ಸ್ವೇಚ್ಛೆಯಿಂದ ಕೂಡಿದೆ. ಬಾಲಕೃಷ್ಣನ್ ಒಂದೆಡೆ ದೂರುದಾರರಾದ ನಜ್ಮಾ ನಜೀರ್ ಪರ ವಕಾಲತ್ತು ವಹಿಸಿದ್ದಾರೆ. ಇತ್ತ ಸರ್ಕಾರ ಅವರನ್ನು ವಿಶೇಷ ಪ್ರಾಸಿಕ್ಯೂಟರ್‌ ಎಂದು ನೇಮಕ ಮಾಡಿದೆ. ಹಾಲಿ ಪ್ರಾಸಿಕ್ಯೂಟರ್‌ ಅನ್ನು ಏಕೆ ಬದಲಾವಣೆ ಮಾಡಲಾಗುತ್ತಿದೆ ಎಂಬುದಕ್ಕೆ ಸಕಾರಣ ನೀಡಿಲ್ಲ’ ಎಂದು ಆಕ್ಷೇಪಿಸಿದರು.

‘ಅಂತೆಯೇ, ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಿಕ್ಕೂ ಕಾರಣ ಏನೆಂಬುದನ್ನು ತಿಳಿಸಿಲ್ಲ. ಈ ಪ್ರಕರಣದಲ್ಲಿ ಅಂತಹ ಸಾರ್ವಜನಿಕ ಹಿತಾಸಕ್ತಿ ಏನಿದೆ ಮತ್ತು ವಿಶೇಷ ಪ್ರಾಸಿಕ್ಯೂಟರ್‌ ಆಗಿ ನೇಮಕ ಮಾಡಲು ಆ ರೀತಿಯ ವಿಶೇಷ ಸಂದರ್ಭ ಹೇಗೆ ನಿರ್ಮಾಣವಾಗಿದೆ ಎಂಬುದನ್ನೂ ತಿಳಿಸಲಾಗಿಲ್ಲ. ಆದ್ದರಿಂದ, ಸರ್ಕಾರದ ಆದೇಶವನ್ನು ವಜಾ ಮಾಡಬೇಕು’ ಎಂದು ಕೋರಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಸರ್ಕಾರದ ಆದೇಶಕ್ಕೆ ತಡೆ ನೀಡಿತು. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಸುಯೋಗ್‌ ಹೇರಳೆ ವಕಾಲತ್ತು ವಹಿಸಿದ್ದಾರೆ.

ಪ್ರಕರಣವೇನು?: ‘ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು, ಹನುಮ ಜಯಂತ್ಯುತ್ಸವದ ಅಂಗವಾಗಿ 2023ರ ಡಿಸೆಂಬರ್ 24ರಂದು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಡಾ.ಪ್ರಭಾಕರ್ ಭಟ್ ಪಾಲ್ಗೊಂಡಿದ್ದರು. ಈ ಸಮಯದಲ್ಲಿ ಅವರು ಮಾಡಿದ್ದ ಭಾಷಣದಲ್ಲಿ ಮುಸ್ಲಿಮರ ವಿರುದ್ಧ ದ್ವೇಷಕಾರಕ ಮಾತುಗಳನ್ನು ಆಡಿದ್ದಾರೆ’ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ದೂರು ನೀಡಿದ್ದರು.

ಇದನ್ನು ಆಧರಿಸಿ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರು ಪ್ರಭಾಕರ್ ಭಟ್ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾತುಗಳನ್ನು ಆಡುವುದು), 509 (ಮಹಿಳೆಯ ಖಾಸಗಿತನಕ್ಕೆ ಸಂಬಂಧಿಸಿದ ಮಾತುಗಳನ್ನಾಡುವುದು), 153ಎ (ಧರ್ಮದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಬಿತ್ತುವುದು) ಮತ್ತು 298ರ (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT